ಬೆಂಗಳೂರು : ರಾಜ್ಯದಲ್ಲಿ ಕೊರೋನಾ ಸೋಂಕಿನಿಂದ ಮೃತಪಟ್ಟಿರುವ ಬಿಪಿಎಲ್ ಕಾರ್ಡ್ ಹೊಂದಿರುವ ಕುಟುಂಸ್ಥರಿಗೆ 1 ಲಕ್ಷ ರೂ. ಪರಿಹಾರವನ್ನು ಮುಖ್ಯಮಂತ್ರಿ ಯಡಿಯೂರಪ್ಪ ಘೋಷಿಸಿದ್ದಾರೆ.
ತಮ್ಮ ಗೃಹ ಕಚೇರಿ ಕೃಷ್ಣಾದಲ್ಲಿಂದು ಹಣಕಾಸು ಇಲಾಖೆಯ ಅಧಿಕಾರಿಗಳ ಸಭೆಯ ನಂತರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಒಂದು ಬಿಪಿಎಲ್ ಕುಟುಂಬದಲ್ಲಿ ಒಬ್ಬರಿಗೆ ಮಾತ್ರ 1 ಲಕ್ಷ ರೂ. ಪರಿಹಾರ ನೀಡುವ ತೀರ್ಮಾನ ಕೈಗೊಳ್ಳಲಾಗಿದೆ.ಈ ಯೋಜನೆಗೆ ಸುಮಾರು 250 ರಿಂದ 300 ಕೋಟಿ ರೂ. ವೆಚ್ಚವಾಗುತ್ತದೆ.ರಾಜ್ಯದಲ್ಲಿ ಬಿಪಿಎಲ್ ಕುಟುಂಬಕ್ಕೆ ಸೇರಿದ
ಸುಮಾರು 25 ಸಾವಿರಕ್ಕೂ ಹೆಚ್ಚು ಮಂದಿ ಮೃತಪಟ್ಟಿರುವ ಅಂದಾಜು ಇದೆ ಎಂದರು.
ಕೊರೊನಾದಿಂದ ಪೋಷಕರನ್ನು ಕಳೆದುಕೊಂಡ ಅನಾಥ ಮಕ್ಕಳಿಗೆ ಶಾಲಾ ಸೇವಾ ಯೋಜನೆಯನ್ನು ಸರ್ಕಾರ ಈಗಾಗಲೇ ಪ್ರಕಟಿಸಿದ್ದು, ಕೊರೊನಾಗೆ ಬಲಿಯಾದ ಬಡವರಿಗೂ 1 ಲಕ್ಷ ರೂ. ಪರಿಹಾರ ನೀಡುವ ಮೂಲಕ ಸರ್ಕಾರ ಬಡವರ ನೆರವಿಗೆ ನಿಂತಿದೆ ಎಂದು ಅವರು ಹೇಳಿದರು.















