ಬೆಂಗಳೂರು: ಕೋವಿಡ್ ಲಸಿಕೆ ಹಾಕಿಸಿಕೊಳ್ಳದಿದ್ದರೆ ಪಿಂಚಣಿ ಹಾಗೂ ಪಡಿತರ ಸೌಲಭ್ಯ ನೀಡಲಾಗುವುದಿಲ್ಲ ಎಂಬ ಸುದ್ದಿಯೊಂದು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದ್ದು, ಅದಕ್ಕೀಗ ಸರ್ಕಾರ ಸ್ಪಷ್ಟೀಕರಣ ನೀಡಿದೆ.
ಈ ಬಗ್ಗೆ ಸರ್ಕಾರದ ಮುಖ್ಯ ಕಾರ್ಯದರ್ಶಿ ಪಿ.ರವಿಕುಮಾರ್ ಸುತ್ತೋಲೆ ಹೊರಡಿಸಿದ್ದಾರೆ.ಪಿಂಚಣಿ ಹಾಗೂ ಪಡಿತರ ಸೇರಿ ಸರ್ಕಾರದ ಯಾವುದೇ ಯೋಜನೆಗಳನ್ನು ಕೋವಿಡ್ ಲಸಿಕೆ ಹಾಕಿಸಿಕೊಳ್ಳುವುದಕ್ಕೆ ಜೋಡಿಸಿಲ್ಲ. ಹೀಗಾಗಿ ಸರ್ಕಾರದ ಯಾವುದೇ ಯೋಜನೆಯ ಫಲಾನುಭವಿ
ಆಗಲು ಕೋವಿಡ್ ಲಸಿಕೆ ಹಾಕಿಸಿಕೊಂಡಿರುವುದು ಕಡ್ಡಾಯವೇನಲ್ಲ.
ಕೋವಿಡ್ ಲಸಿಕೆ ಹಾಕಿಸಿಕೊಳ್ಳುವಂತೆ ಜನರಿಗೆ ಯಾವುದೇ ನಿರ್ಬಂಧ ಹೇರದೆ ಜಾಗೃತಿ ಮೂಡಿಸುವ ಅಭಿಯಾನದ ಮೂಲಕ ಕೋವಿಡ್ ಲಸಿಕೀಕರಣವನ್ನು ಯಶಸ್ವಿಯಾಗಿ ಪೂರ್ಣಗೊಳಿಸಬೇಕೆಂದು ಎಲ್ಲಾ ಜಿಲ್ಲೆಯ ಜಿಲ್ಲಾಧಿಕಾರಿಗಳಿಗೆ ನಿರ್ದೇಶನ ನೀಡಿದ್ದಾರೆ.















