ಬಂಟ್ವಾಳ: ಶ್ರೀ ವೆಂಕಟರಮಣ ಸ್ವಾಮಿ ದೇವಳ ಪದವಿಪೂರ್ವ ಕಾಲೇಜಿನ ಮೂರನೇ ವಾರ್ಷಿಕ ಕ್ರೀಡಾಕೂಟ-2026 ಇತ್ತೀಚೆಗೆ ಎಸ್.ವಿ.ಎಸ್. ಟೆಂಪಲ್ ಇಂಗ್ಲಿಷ್ ಮೀಡಿಯಂ ಸ್ಕೂಲ್ ಮೈದಾನದಲ್ಲಿ ನಡೆಯಿತು.
ಕಾರ್ಯಕ್ರಮದಲ್ಲಿ ಮಾತನಾಡಿದ ಆಡಳಿತ ಮಂಡಳಿ ಸದಸ್ಯ ಶಿವಾನಂದ ಬಾಳಿಗಾ ಅವರು, ವಿದ್ಯಾರ್ಥಿಗಳು ಪಠ್ಯದ ಜೊತೆಗೆ ಪಠ್ಯೇತರ ಚಟುವಟಿಕೆಗಳಲ್ಲಿಯೂ ಸಕ್ರಿಯವಾಗಿ ಪಾಲ್ಗೊಂಡಾಗ ಮಾತ್ರ ವ್ಯಕ್ತಿತ್ವ ವಿಕಸನ ಸಾಧ್ಯ. ಜೀವನದಲ್ಲಿ ದೊರೆಯುವ ಅವಕಾಶಗಳನ್ನು ವಿದ್ಯಾರ್ಥಿಗಳು ಸದುಪಯೋಗಪಡಿಸಿಕೊಳ್ಳಬೇಕು. ಈ ನಿಟ್ಟಿನಲ್ಲಿ ನಮ್ಮ ಕಾಲೇಜು ವಿದ್ಯಾರ್ಥಿಗಳಿಗೆ ಸೂಕ್ತ ವೇದಿಕೆಯನ್ನು ಒದಗಿಸುತ್ತಿದೆ ಎಂದರು.
ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದ ವೆಂಕಟರಮಣ ಶೆಣೈ ಅವರು ಮಾತನಾಡಿ, ಕ್ರೀಡೆಯಲ್ಲಿ ಭಾಗವಹಿಸುವುದು ಮುಖ್ಯವೇ
ಹೊರತು ಸೋಲು-ಗೆಲುವು ಮುಖ್ಯವಲ್ಲ. ಕ್ರೀಡಾ ಚಟುವಟಿಕೆಗಳು ವಿದ್ಯಾರ್ಥಿಗಳ ದೈಹಿಕ ಹಾಗೂ ಮಾನಸಿಕ ಬೆಳವಣಿಗೆಗೆ ಪೂರಕವಾಗಿವೆ ಎಂದು ಹೇಳಿದರು.
ಕಾಲೇಜಿನ ಪ್ರಾಂಶುಪಾಲ ಗಂಗಾಧರ ಆಳ್ವ ಅವರು ಶುಭ ಹಾರೈಸಿದರು. ಮೋಕ್ಷಿತ ದೇವಾಡಿಗ ಅವರು ಕ್ರೀಡಾಕೂಟದ ಪ್ರತಿಜ್ಞಾವಿಧಿ ನೆರವೇರಿಸಿದರು. ಉಪನ್ಯಾಸಕ ವೆಂಕಟೇಶ ನಾಯಕ್ ಸ್ವಾಗತಿಸಿ ಕಾರ್ಯಕ್ರಮ ನಿರೂಪಿಸಿದರು. ಉಪನ್ಯಾಸಕ ಅಲನ್ ವಂದಿಸಿದರು.
ಬಳಿಕ ವಿದ್ಯಾರ್ಥಿಗಳು ವಿವಿಧ ಕ್ರೀಡಾ ಸ್ಪರ್ಧೆಗಳಲ್ಲಿ ಉತ್ಸಾಹದಿಂದ ಪಾಲ್ಗೊಂಡರು. ಕ್ರೀಡಾಕೂಟವು ಯಶಸ್ವಿಯಾಗಿ ಸಂಪನ್ನಗೊಂಡಿತು.









