ಬೆಲೆ ಏರಿಕೆ ಮುಚ್ಚಿಡಲು ಬಿಜೆಪಿ ಗ್ರಾಮೀಣ ಮಟ್ಟದಲ್ಲಿ ಪ್ರತಿಭಟನೆ ನಾಟಕ: ಬಿ. ರಮಾನಾಥ ರೈ

Coastal Bulletin
ಬೆಲೆ ಏರಿಕೆ ಮುಚ್ಚಿಡಲು ಬಿಜೆಪಿ ಗ್ರಾಮೀಣ ಮಟ್ಟದಲ್ಲಿ ಪ್ರತಿಭಟನೆ ನಾಟಕ: ಬಿ. ರಮಾನಾಥ ರೈ

ಬಂಟ್ವಾಳ: ಪ್ರತಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಸಂವಿಧಾನ ಉಳಿಸುವ ಹೋರಾಟ ನಡೆಸುತ್ತಿರುವ ಭಾರತೀಯ ಜನತಾ ಪಾರ್ಟಿಯ ಕಾರ್ಯವೈಖರಿ ವಿಪರ್ಯಾಸ ಎಂದು ಮಾಜಿ ಸಚಿವ ಬಿ. ರಮಾನಾಥ ರೈ ಟೀಕಿಸಿದ್ದಾರೆ.

ಅವರು ಪಾಣೆಮಂಗಳೂರು ಬ್ಲಾಕ್ ಕಾಂಗ್ರೆಸ್ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿ ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರವು ಕಚ್ಚಾ ತೈಲದ ಬೆಲೆ ಇಳಿಕೆಯಾಗಿದ್ದರೂ ಖಾಸಗಿ ಕಂಪನಿಗಳು ಹಾಗೂ ಬಂಡವಾಳಶಾಹಿಗಳ ಪರವಾಗಿ ಇಂಧನ ಬೆಲೆ ಏರಿಕೆ ಮಾಡುತ್ತಿದೆ. ಇದರಿಂದ ಆಹಾರ ಸಾಮಗ್ರಿಗಳು ಸೇರಿದಂತೆ ಅಗತ್ಯ ವಸ್ತುಗಳ ಬೆಲೆ ಏರಿಕೆಯಾಗಿ ಜನಸಾಮಾನ್ಯರು ಸಂಕಷ್ಟ ಅನುಭವಿಸುವಂತಾಗಿದೆ. ಈ ವಾಸ್ತವವನ್ನು ಮರೆಮಾಚಲು ಬಿಜೆಪಿ ಗ್ರಾಮೀಣ ಮಟ್ಟದಲ್ಲಿ ಪ್ರತಿಭಟನೆಯ ನಾಟಕವಾಡುತ್ತಿದೆ ಎಂದು ಅವರು ಆರೋಪಿಸಿದರು.

ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟ ಕಾಂಗ್ರೆಸ್ ಪಕ್ಷವೇ ಅರಾಜಕತೆ ಸೃಷ್ಟಿಸುತ್ತಿದೆ ಎಂದು ಬಿಜೆಪಿ ಆರೋಪಿಸುತ್ತಿರುವುದು ವಿಪರ್ಯಾಸ. ಹೈನುಗಾರಿಕೆ ನಡೆಸುತ್ತಿರುವ ರೈತರ ಹಿತದೃಷ್ಟಿಯಿಂದ ಹಾಲಿನ ದರ ಏರಿಕೆ ಮಾಡಲಾಗಿದ್ದು, ಕಳೆದ 12 ವರ್ಷಗಳಲ್ಲಿ ಕೇಂದ್ರ ಸರ್ಕಾರ ಅನುಸರಿಸಿದ ಹಲವು ತಪ್ಪು ಆರ್ಥಿಕ ನೀತಿಗಳೇ ಅಗತ್ಯ ವಸ್ತುಗಳ ಬೆಲೆ ಏರಿಕೆಗೆ ಮೂಲ ಕಾರಣ ಎಂಬ ಸತ್ಯವನ್ನು ಮರೆಮಾಚಲಾಗುತ್ತಿದೆ ಎಂದರು.

ಪೆಟ್ರೋಲ್‌ನಲ್ಲಿ ಅತಿಯಾದ ಎಥೆನಾಲ್ ಬಳಕೆ, ಗ್ಯಾಸ್ ಸಬ್ಸಿಡಿ ಕಡಿತ ಸೇರಿದಂತೆ ಹಲವು ಜನವಿರೋಧಿ

ಕ್ರಮಗಳನ್ನು ಬಿಜೆಪಿ ಸರ್ಕಾರ ಕೈಗೊಂಡಿದೆ. ಎಸ್‌ಐಆರ್ ನೆಪದಲ್ಲಿ ನಿರ್ದಿಷ್ಟ ಮತದಾರರನ್ನು ಮತದಾರರ ಪಟ್ಟಿಯಿಂದ ಹೊರಗಿಡುವ ಹುನ್ನಾರ ನಡೆಯುತ್ತಿದೆ ಎಂದು ಆರೋಪಿಸಿದರು.

ಇದಲ್ಲದೆ, ವಿಮಾನ ನಿಲ್ದಾಣ ಸೇರಿದಂತೆ ಹಲವು ಸರ್ಕಾರಿ ಸಂಸ್ಥೆಗಳನ್ನು ಅಂಬಾನಿ ಮತ್ತು ಅದಾನಿ ಅವರಂತಹ ಉದ್ಯಮಿಗಳಿಗೆ ಮಾರಾಟ ಮಾಡಲಾಗಿದೆ. ಬಿಪಿಎಲ್ ಪಡಿತರ ಚೀಟಿ, ನಿವೇಶನ, ವಸತಿ ಸೇರಿದಂತೆ ಜನಸಾಮಾನ್ಯರಿಗೆ ಸಂಬಂಧಿಸಿದ ಹಲವು ವಿಚಾರಗಳಲ್ಲಿಯೂ ಸರ್ಕಾರದ ನೀತಿಗಳಿಂದ ಜನರಿಗೆ ತೊಂದರೆಯಾಗುತ್ತಿದೆ ಎಂದು ಟೀಕಿಸಿದರು.

ಸುದ್ದಿಗೊಷ್ಟಿಯಲ್ಲಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರುಗಳಾದ ಬಾಲಕೃಷ್ಣ ಅಂಚನ್, ಚಂದ್ರಶೇಖರ ಭಂಡಾರಿ, ಬಂಟ್ವಾಳ ನಗರ ಯೋಜನಾ ಪ್ರಾಧಿಕಾರ ಅಧ್ಯಕ್ಷ ಬೇಬಿ ಕುಂದ‌ರ್, ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷೆ ಜಯಂತಿ ವಿ. ಪೂಜಾರಿ, ಪ್ರಮುಖರಾದ ಚಂದ್ರಪ್ರಕಾಶ್‌ ಶೆಟ್ಟಿ ತುಂಬೆ, ಬಿ.ಎಂ.ಅಬ್ಬಾಸ್ ಆಲಿ, ಸುದೀಪ್ ಶೆಟ್ಟಿ ಮಾಣಿ, ಇಬ್ರಾಹಿಂ ನವಾಝ್ ಬಡಕಬೈಲ್‌, ಲವೀನಾ ವಿಲ್ಮಾ ಮೋರಾಸ್, ಐಡಾ ಸುರೇಶ್, ಸಿದ್ದಿಕ್ ಗುಡ್ಡೆಯಂಗಡಿ, ಸಂಪತ್ ಕುಮಾರ್ ಶೆಟ್ಟಿ, ಕುಶಲ ಶೆಟ್ಟಿ, ನಿರಂಜನ್ ರೈ ನೌಫಾಲ್ ಕನ್ಯಾನ ಉಪಸ್ಥಿತರಿದ್ದರು

Leave a Comment