ಬಂಟ್ವಾಳ: ಕರ್ನಾಟಕ ರಾಜ್ಯ ಕುಲಾಲ ಕುಂಬಾರ ಯುವ ವೇದಿಕೆ ಹಾಗೂ ಮಹಿಳಾ ಸಂಘಟನೆಗಳ ಒಕ್ಕೂಟ (ರಿ.) ಬಂಟ್ವಾಳ ವಿಧಾನಸಭಾ ಕ್ಷೇತ್ರದ ಆಶ್ರಯದಲ್ಲಿ ಮಕ್ಕಳ ದಿನಾಚರಣೆಯ ಪ್ರಯುಕ್ತ ಬೆಂಜನಪದವಿನ ಡಾ. ಬಿ.ಆರ್. ಅಂಬೇಡ್ಕರ್ ವಸತಿ ಶಾಲೆಯಲ್ಲಿ ಮಕ್ಕಳೊಂದಿಗೆ ವಿವಿಧ ಮನರಂಜನಾ ಹಾಗೂ ಸ್ಪರ್ಧಾ ಕಾರ್ಯಕ್ರಮಗಳೊಂದಿಗೆ ಆಚರಿಸಲಾಯಿತು.
ಕಾರ್ಯಕ್ರಮದಲ್ಲಿ ಅಥಿತಿಗಳಾಗಿ ಉದ್ಯಮಿ ಬೂಬ ಸಾಲ್ಯಾನ್ ಮೊಗರ್ನಾಡು,ಬೂಡಾ ಮಾಜಿ ಅಧ್ಯಕ್ಷ ಸದಾಶಿವ ಬಂಗೇರ, ರಾರಾಸಂ ಫೌಂಡೇಶನ್ ಅಧ್ಯಕ್ಷ ರಾಧಾಕೃಷ್ಣ ಬಂಟ್ವಾಳ, ಪತ್ರಕರ್ತ ಸಂತೋಷ್ ಕುಲಾಲ್ ನೆತ್ತರಕೆರೆ, ಪುರುಷೋತ್ತಮ್ ಹಾಲಾಡಿ ಹಾಗೂ ಶಾಲೆಯ ಮುಖ್ಯೋಪಾಧ್ಯಾಯ ಪ್ರಸಾದ್ ಉಪಸ್ಥಿತರಿದ್ದರು.
ಈ ಸಂದರ್ಭದಲ್ಲಿ ಕೇವಲ 2 ವರ್ಷ 9 ತಿಂಗಳ ಪ್ರಾಯದಲ್ಲೇ ಐದು ಸಂಸ್ಕೃತ ಶ್ಲೋಕಗಳನ್ನು ಕಂಠಪಾಠ ಮಾಡಿ, ಕನ್ನಡ ಮತ್ತು ತುಳು ಭಕ್ತಿಗೀತೆಗಳನ್ನು ಸುಶ್ರಾವ್ಯವಾಗಿ ಹಾಡುವ ಮೂಲಕ ಇಂಡಿಯಾ ಬುಕ್ ಆಫ್ ರೆಕಾರ್ಡ್ಸ್‌ನಲ್ಲಿ ಸಾಧನೆ ದಾಖಲಿಸಿರುವ ಪುಟಾಣಿ ಪ್ರದ್ಯ ಕುಲಾಲ್ ಅವರನ್ನು ಅಭಿನಂದಿಸಲಾಯಿತು. ಅಲ್ಲದೆ, ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ
ರಾರಾಸಂ ಫೌಂಡೇಶನ್ ಅಧ್ಯಕ್ಷ ರಾಧಾಕೃಷ್ಣ ಬಂಟ್ವಾಳ ಅವರನ್ನು ಸನ್ಮಾನಿಸಿ ಗೌರವಿಸಲಾಯಿತು.
ಬಳಿಕ ಮಕ್ಕಳಿಗಾಗಿ ವಿವಿಧ ಒಳಾಂಗಣ ಹಾಗೂ ಹೊರಾಂಗಣ ಕ್ರೀಡಾ ಸ್ಪರ್ಧೆಗಳನ್ನು ಆಯೋಜಿಸಲಾಯಿತು. ಮಕ್ಕಳು ಉತ್ಸಾಹದಿಂದ ಸ್ಪರ್ಧೆಗಳಲ್ಲಿ ಪಾಲ್ಗೊಂಡು ತಮ್ಮ ಪ್ರತಿಭೆ ಹಾಗೂ ಕ್ರೀಡಾ ಸಾಮರ್ಥ್ಯವನ್ನು ಪ್ರದರ್ಶಿಸಿದರು. ವಿಜೇತರಿಗೆ ಬಹುಮಾನ ವಿತರಿಸಲಾಯಿತು.
ಮಕ್ಕಳೊಂದಿಗೆ ಬೆರೆತು ಅವರ ಸಂತೋಷದಲ್ಲಿ ಭಾಗಿಯಾಗುವ ಮೂಲಕ ಮಕ್ಕಳ ದಿನಾಚರಣೆಯನ್ನು ಅರ್ಥಪೂರ್ಣವಾಗಿ ಆಚರಿಸಲಾಯಿತು. ಮಕ್ಕಳ ಪ್ರತಿಭೆಯನ್ನು ಗುರುತಿಸಿ ಪ್ರೋತ್ಸಾಹಿಸುವ ಹಾಗೂ ಅವರಲ್ಲಿ ಆತ್ಮವಿಶ್ವಾಸ ತುಂಬುವ ನಿಟ್ಟಿನಲ್ಲಿ ಕಾರ್ಯಕ್ರಮ ಗಮನ ಸೆಳೆಯಿತು.
ಸುಕುಮಾರ ಬಂಟ್ವಾಳ ಪ್ರಾಸ್ತವಿಕವಾಗಿ ಮಾತನಾಡಿ ಸ್ವಾಗತಿಸಿದರು. ನಿತೇಶ್ ಪಲ್ಲಿಕಂಡ ವಂದಿಸಿ, ಹೆಚ್.ಕೆ. ನೈನಾಡ್ ಕಾರ್ಯಕ್ರಮ ನಿರೂಪಿಸಿದರು.









