ಬಂಟ್ವಾಳ: ರಾಜ್ಯ ಕಾಂಗ್ರೆಸ್ ಸರಕಾರದ ಪಂಚ ಗ್ಯಾರಂಟಿ ಯೋಜನೆಗಳ ಬಗ್ಗೆ ಟೀಕೆ ಮಾಡುವ ಬಿಜೆಪಿಯು ತಾಕತ್ತಿದ್ದರೆ ಗ್ಯಾರಂಟಿ ಯೋಜನೆಗಳು ಬೇಡವೆಂದು ಬಿಜೆಪಿಯವರು ಬಹಿರಂಗವಾಗಿ ಹೇಳುವ ಧೈರ್ಯ ಪ್ರದರ್ಶಿಸಲಿ ಎಂದು ಪಂಚ ಗ್ಯಾರಂಟಿ ಅನುಷ್ಠಾನ ಸಮಿತಿ ಬಂಟ್ವಾಳ ತಾಲೂಕು ಅಧ್ಯಕ್ಷರಾದ ಜಯಂತಿ ವಿ.ಪೂಜಾರಿ ತಿರುಗೇಟು ನೀಡಿದರು .
ಸೋಮವಾರ ಬಿ ಸಿ ರೋಡ್ ಪ್ರೆಸ್ ಕ್ಲಬ್ನಲ್ಲಿ ನಡೆದ ಪತ್ರಿಕಾಗೋಷ್ಟಿಯಲ್ಲಿ ಮಾತನಾಡಿದ ಅವರು, ಗ್ಯಾರಂಟಿ ಯೋಜನೆಗಳು ಜನರಿಗೆ ಬೇಡವೆಂದಾದರೆ ಅದನ್ನು ಬಹಿರಂಗವಾಗಿ ಹೇಳಲಿ ಎಂದು ಬಿಜೆಪಿ ನಾಯಕರಿಗೆ ಸವಾಲು ಹಾಕಿದರು.
ರಾಜ್ಯ ಸರ್ಕಾರದ ಪಂಚ ಗ್ಯಾರಂಟಿ ಯೋಜನೆಗಳ ಬಗ್ಗೆ ಟೀಕೆ ಮಾಡುವ ಬಿಜೆಪಿಯವರು, ಮೊದಲು ತಮ್ಮ ಮನೆಯ ಮಹಿಳೆಯರಿಗೆ ಗೃಹಲಕ್ಷ್ಮಿ ಯೋಜನೆಯಡಿ ದೊರೆಯುವ 2,000 ರೂ. ಹಣ ಕುಟುಂಬದ ದೈನಂದಿನ ಖರ್ಚು, ಮಕ್ಕಳ ವಿದ್ಯಾಭ್ಯಾಸ ಹಾಗೂ ಆರೋಗ್ಯದ ಅಗತ್ಯಗಳಿಗೆ ಹೇಗೆ ನೆರವಾಗುತ್ತಿದೆ ಎಂಬುದನ್ನು ಅರಿತುಕೊಳ್ಳಲಿ ಎಂದು ಬಂಟ್ವಾಳ ತಾಲೂಕು ಪಂಚಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷೆ ಜಯಂತಿ ವಿ. ಪೂಜಾರಿ ಹೇಳಿದರು.
ಗ್ರಾಮೀಣ ಪ್ರದೇಶಗಳಲ್ಲಿ ಬಿಜೆಪಿ ನಡೆಸುತ್ತಿರುವ ಜನಾಕ್ರೋಶ ಪ್ರತಿಭಟನೆಗಳ ಉದ್ದೇಶ ಜನರ ಸಮಸ್ಯೆಗಳಿಗೆ ಸ್ಪಂದಿಸುವುದೋ ಅಥವಾ ರಾಜಕೀಯ ಅಸ್ತಿತ್ವ ಉಳಿಸಿಕೊಳ್ಳುವುದೋ ಎಂಬುದನ್ನು ಮೊದಲು ಸ್ಪಷ್ಟಪಡಿಸಬೇಕು. ಸರ್ಕಾರದ ಜನಪರ ಯೋಜನೆಗಳ ಕುರಿತು ತಪ್ಪು ಅಭಿಪ್ರಾಯ ಮೂಡಿಸುವ ಮೂಲಕ ರಾಜಕೀಯ ಲಾಭ ಪಡೆಯಲು ಬಿಜೆಪಿ ಪ್ರಯತ್ನಿಸುತ್ತಿದೆ ಎಂದು
ಆರೋಪಿಸಿದರು.
ಗ್ಯಾರಂಟಿ ಯೋಜನೆಗಳಿಂದ ಅಭಿವೃದ್ಧಿ ಕಾರ್ಯಗಳಿಗೆ ಹಿನ್ನಡೆಯಾಗಿದೆ ಮತ್ತು ಅನುದಾನದ ಕೊರತೆ ಎದುರಾಗಿದೆ ಎಂಬ ಬಿಜೆಪಿಯ ಆರೋಪ ನಿರಾಧಾರವಾಗಿದೆ. ಈ ಯೋಜನೆಗಳು ಬಡವರು, ಮಹಿಳೆಯರು, ಯುವಜನರು ಹಾಗೂ ಮಧ್ಯಮ ವರ್ಗದ ಕುಟುಂಬಗಳಿಗೆ ಆರ್ಥಿಕ ನೆರವು ನೀಡುತ್ತಿವೆ. ಮಹಿಳೆಯರ ಸ್ವಾವಲಂಬನೆ, ಕುಟುಂಬಗಳ ಆರ್ಥಿಕ ಭದ್ರತೆ, ಆಹಾರ ಮತ್ತು ವಿದ್ಯುತ್ ವೆಚ್ಚದ ಹೊರೆ ಕಡಿಮೆ ಮಾಡುವುದೂ ಅಭಿವೃದ್ಧಿಯ ಭಾಗವಾಗಿದೆ ಎಂದು ತಿಳಿಸಿದರು.
ಗ್ಯಾರಂಟಿ ಯೋಜನೆಗಳ ಅನುಷ್ಠಾನದ ನಡುವೆಯೂ ಸರ್ಕಾರ ರಸ್ತೆ, ಕುಡಿಯುವ ನೀರು, ಶಿಕ್ಷಣ, ಆರೋಗ್ಯ, ಸೇತುವೆ ಸೇರಿದಂತೆ ಗ್ರಾಮೀಣ ಪ್ರದೇಶಗಳ ಮೂಲಸೌಕರ್ಯ ಅಭಿವೃದ್ಧಿಗೆ ಅನುದಾನ ಒದಗಿಸುತ್ತಿದೆ. ಸರ್ಕಾರದ ಆರ್ಥಿಕ ನಿರ್ವಹಣೆ ಬಗ್ಗೆ ಪ್ರಶ್ನೆಗಳಿದ್ದರೆ ದಾಖಲೆಗಳ ಸಹಿತ ಚರ್ಚಿಸಲಿ. ಕೇವಲ ಆರೋಪಗಳನ್ನು ಮಾಡುವುದರಿಂದ ವಾಸ್ತವಾಂಶ ಬದಲಾಗುವುದಿಲ್ಲ ಎಂದು ಜಯಂತಿ ವಿ. ಪೂಜಾರಿ ಹೇಳಿದರು.
ಪತ್ರಿಕಾಗೋಷ್ಠಿಯಲ್ಲಿ ಪಂಚಗ್ಯಾರಂಟಿ ಅನುಷ್ಠಾನ ಸಮಿತಿ ಸದಸ್ಯರಾದ ಚಂದ್ರಶೇಖರ ಆಚಾರ್ಯ ರಾಯಿ, ಸತೀಶ್ ನಾವರ, ಕೃಷ್ಣಪ್ಪ ಪೂಜಾರಿ ಹಾಗೂ ಕರೀಂ ಬೊಳ್ಳಾಯಿ ಉಪಸ್ಥಿತರಿದ್ದರು.









