ಬಂಟ್ವಾಳ: ರಾಜ್ಯ ಸರ್ಕಾರವು ಮತಾಂತರ ನಿಷೇಧ ಕಾಯ್ದೆ ಹಾಗೂ ಗೋಹತ್ಯೆ ನಿಷೇಧ ಪ್ರತಿಬಂಧಕ ಕಾಯ್ದೆಗಳನ್ನು ವಾಪಸ್ ಪಡೆಯುವ ನಿರ್ಧಾರ ಕೈಗೊಂಡರೆ ರಾಜ್ಯಾದ್ಯಂತ ಬೃಹತ್ ಪ್ರತಿಭಟನೆ ನಡೆಸಲಾಗುವುದು ಎಂದು ವಿಶ್ವ ಹಿಂದೂ ಪರಿಷತ್ ಎಚ್ಚರಿಕೆ ನೀಡಿದೆ.
ಬೆಳಗಾವಿಯಲ್ಲಿ ನಡೆಯಲಿರುವ ಚಳಿಗಾಲದ ಅಧಿವೇಶನದಲ್ಲಿ ಈ ಎರಡೂ ಕಾಯ್ದೆಗಳನ್ನು ಯಾವುದೇ ಕಾರಣಕ್ಕೂ ಹಿಂಪಡೆಯಬಾರದು ಎಂದು ಆಗ್ರಹಿಸಿರುವ ವಿಹಿಂಪ, ಈ ಸಂಬಂಧ ಜಿಲ್ಲಾಧಿಕಾರಿ ಹಾಗೂ ತಹಶೀಲ್ದಾರ್ ಮೂಲಕ ಸರ್ಕಾರಕ್ಕೆ ಮನವಿ ಸಲ್ಲಿಸಲು ನಿರ್ಧರಿಸಿದೆ ಎಂದು ಬಂಟ್ವಾಳ ಪ್ರಖಂಡ ಅಧ್ಯಕ್ಷ ಪ್ರಸಾದ್ ಕುಮಾರ್ ರೈ ತಿಳಿಸಿದರು.
ಬಂಟ್ವಾಳ ಪ್ರೆಸ್ ಕ್ಲಬ್ನಲ್ಲಿ ಸೋಮವಾರ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಮತಾಂತರ ನಿಷೇಧ ಕಾಯ್ದೆಯು ಯಾವುದೇ ನಿರ್ದಿಷ್ಟ ಧರ್ಮವನ್ನು ಗುರಿಯಾಗಿಸದೆ, ಬಲವಂತ, ವಂಚನೆ ಹಾಗೂ ಆಮಿಷದ ಮೂಲಕ ನಡೆಯುವ ಮತಾಂತರವನ್ನು ತಡೆಯುವ ಉದ್ದೇಶ ಹೊಂದಿದೆ. ಗೋಹತ್ಯೆ ನಿಷೇಧ ಕಾಯ್ದೆ ಜಾರಿಯಾದ ಬಳಿಕ
ಸಾವಿರಾರು ಗೋವುಗಳ ರಕ್ಷಣೆಯಾಗಿದೆ ಎಂದು ಹೇಳಿದರು.
ಇದೇ ವೇಳೆ ಭಾರತೀಯ ಸೇನೆಯ ಹೆಸರಿನಲ್ಲಿ ಧರ್ಮದ ಆಧಾರದಲ್ಲಿ ಮಿಲಿಟರಿ ತರಬೇತಿ ನೀಡುವ ಪ್ರಸ್ತಾಪದ ಬಗ್ಗೆಯೂ ಆಕ್ಷೇಪ ವ್ಯಕ್ತಪಡಿಸಿದ ಅವರು, ಸೇನೆಯ ಮೇಲ್ವಿಚಾರಣೆ ಇಲ್ಲದೆ ಖಾಸಗಿ ಸಂಸ್ಥೆಗಳ ಮೂಲಕ ಧಾರ್ಮಿಕ ಆಧಾರದಲ್ಲಿ ತರಬೇತಿ ನೀಡುವುದು ರಾಷ್ಟ್ರೀಯ ಭದ್ರತೆಯ ದೃಷ್ಟಿಯಿಂದ ಸೂಕ್ತವಲ್ಲ ಎಂದರು.
ಈ ಮೂರು ವಿಚಾರಗಳಲ್ಲಿ ಸರ್ಕಾರ ತನ್ನ ನಿರ್ಧಾರವನ್ನು ಮರುಪರಿಶೀಲಿಸಬೇಕು. ಕಾಯ್ದೆಗಳನ್ನು ಹಿಂಪಡೆಯುವ ಪ್ರಯತ್ನ ಮುಂದುವರಿದರೆ ರಾಜ್ಯಾದ್ಯಂತ ಹೋರಾಟ ನಡೆಸಲಾಗುವುದು ಎಂದು ಎಚ್ಚರಿಸಿದರು.
ಪತ್ರಿಕಾಗೋಷ್ಠಿಯಲ್ಲಿ ವಿಹಿಂಪ ಪ್ರಮುಖರಾದ ಲೋಹಿತ್ ಪಣೋಲಿಬೈಲ್, ಸಂತೋಷ್ ಸರಪಾಡಿ, ಸಂದೇಶ್ ಕಾಡಬೆಟ್ಟು ಹಾಗೂ ಕೇಶವ ದೈಪಲ ಉಪಸ್ಥಿತರಿದ್ದರು.









