ಬಂಟ್ವಾಳ: ರಾಜ್ಯದಲ್ಲಿ ಕಳೆದ ಮೂರು ವರ್ಷಗಳಿಂದ ಅರ್ಹ ಬಡ ಕುಟುಂಬಗಳಿಗೆ ಬಿಪಿಎಲ್ ಪಡಿತರ ಚೀಟಿ ವಿತರಣೆ ಸ್ಥಗಿತಗೊಂಡಿರುವುದರಿಂದ ಸಾವಿರಾರು ಕುಟುಂಬಗಳು ಸರಕಾರದ ವಿವಿಧ ಯೋಜನೆಗಳ ಸೌಲಭ್ಯಗಳಿಂದ ವಂಚಿತರಾಗಿದ್ದಾರೆ. ಈ ಹಿನ್ನೆಲೆಯಲ್ಲಿ ವಾಸ್ತವ್ಯದ ಪುರಾವೆಯಾಗಿ ಅಗತ್ಯವಿರುವ ಅರ್ಹರಿಗೆ ಎಪಿಎಲ್ ಪಡಿತರ ಚೀಟಿಯನ್ನು ತಕ್ಷಣ ವಿತರಿಸುವ ವ್ಯವಸ್ಥೆ ಜಾರಿಗೊಳಿಸಬೇಕು ಎಂದು ಬಂಟ್ವಾಳ ತಾಲೂಕು ಪಂಚಾಯತ್ ಮಾಜಿ ಸದಸ್ಯ ಪ್ರಭಾಕರ ಪ್ರಭು ಆಗ್ರಹಿಸಿದ್ದಾರೆ.
ಬಿಪಿಎಲ್ ಪಡಿತರ ಚೀಟಿ ಇಲ್ಲದಿರುವುದು ಹಾಗೂ ಆದಾಯ ಮಿತಿಯ ಕಾರಣದಿಂದ ಸಂಧ್ಯಾ ಸುರಕ್ಷಾ, ವಿಧವಾ ವೇತನ, ವೃದ್ಧಾಪ್ಯ ವೇತನ, ವಿಕಲಚೇತನರ ಪಿಂಚಣಿ ಸೇರಿದಂತೆ ವಿವಿಧ ಸೌಲಭ್ಯಗಳನ್ನು ಪಡೆಯಲು ಅನೇಕರು ತೊಂದರೆ ಅನುಭವಿಸುತ್ತಿದ್ದಾರೆ. ವಿಶೇಷವಾಗಿ ಪಿಂಚಣಿ ಅವಲಂಬಿತ ವೃದ್ಧರು ಸಂಕಷ್ಟಕ್ಕೆ ಸಿಲುಕಿದ್ದಾರೆ ಎಂದು ಅವರು ತಿಳಿಸಿದ್ದಾರೆ.
ಇನ್ನೊಂದೆಡೆ, ಅನೇಕ ಕೃಷಿಕ ಕುಟುಂಬಗಳು ವಾಸ್ತವ್ಯದ ಪುರಾವೆಯಾಗಿ ಸಲ್ಲಿಸಲು ಪಡಿತರ ಚೀಟಿ ಇಲ್ಲದ ಕಾರಣ ಸಹಕಾರಿ ಸಂಘಗಳಲ್ಲಿ ಕೃಷಿ ಸಾಲ ಸೌಲಭ್ಯ ಪಡೆಯಲು ಸಮಸ್ಯೆ ಎದುರಿಸುತ್ತಿವೆ. ಸಣ್ಣಪುಟ್ಟ ವ್ಯಾಪಾರಸ್ಥರು ಹಾಗೂ ಮಧ್ಯಮ ವರ್ಗದವರಿಗೂ ವಿವಿಧ ಸರಕಾರಿ ಮತ್ತು
ಸಹಕಾರಿ ಸೌಲಭ್ಯಗಳನ್ನು ಪಡೆಯಲು ಪಡಿತರ ಚೀಟಿ ಅಗತ್ಯವಾಗಿದೆ.
ಬಿಪಿಎಲ್ ಪಡಿತರ ಚೀಟಿ ವಿತರಣೆಗೆ ಆರ್ಥಿಕ ಕಾರಣಗಳಿಂದ ತೊಂದರೆಯಾಗುತ್ತಿದ್ದರೆ, ಸರಕಾರಕ್ಕೆ ಯಾವುದೇ ಹೆಚ್ಚುವರಿ ಆರ್ಥಿಕ ಹೊರೆ ಉಂಟುಮಾಡದ ಎಪಿಎಲ್ ಪಡಿತರ ಚೀಟಿಯನ್ನಾದರೂ ಅರ್ಹರಿಗೆ ತಕ್ಷಣ ವಿತರಿಸಬೇಕು. ಈ ಪ್ರಕ್ರಿಯೆಯನ್ನು ನಿರಂತರವಾಗಿ ಮುಂದುವರಿಸಲು ಆಹಾರ ಇಲಾಖೆ ಕ್ರಮ ಕೈಗೊಳ್ಳಬೇಕು ಎಂದು ಅವರು ಆಹಾರ ಮತ್ತು ನಾಗರಿಕ ಸರಬರಾಜು ಸಚಿವರಿಗೆ ಸಲ್ಲಿಸಿರುವ ಮನವಿಯಲ್ಲಿ ಒತ್ತಾಯಿಸಿದ್ದಾರೆ.
ಜೊತೆಗೆ ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಯ ಆಯುಕ್ತರು ಹಾಗೂ ದಕ್ಷಿಣ ಕನ್ನಡ ಜಿಲ್ಲಾಧಿಕಾರಿಗಳಿಗೂ ಮನವಿ ಸಲ್ಲಿಸಿ ಅಗತ್ಯ ಕ್ರಮ ಕೈಗೊಳ್ಳುವಂತೆ ವಿನಂತಿಸಿದ್ದಾರೆ.










