ಬಂಟ್ವಾಳ: ಸುಮಾರು 13 ವರ್ಷಗಳ ಹಿಂದೆ ಕೇಂದ್ರ ಭೂ ಸಾರಿಗೆ ಸಚಿವ ಆಸ್ಕರ್ ಫೆರ್ನಾಂಡಿಸ್ ಅವರ ಅವಧಿಯಲ್ಲಿ ಎನ್‌ಎಂಪಿಟಿ ವತಿಯಿಂದ ನಿರ್ಮಿಸಲಾದ ಬ್ರಹ್ಮರಕೂಟ್ಲು ಟೋಲ್ ಗೇಟ್ ಅಧಿಕೃತವಾಗಿದ್ದು, ಅಂದು ಮೌನವಾಗಿದ್ದ ಮಾಜಿ ಸಚಿವ ಬಿ. ರಮಾನಾಥ ರೈ ಅವರು ಇದೀಗ ಪ್ರತಿಭಟನೆಯ ನಾಟಕವಾಡುತ್ತಿದ್ದಾರೆ ಎಂದು ಬಿಜೆಪಿ ಜಿಲ್ಲಾ ವಕ್ತಾರ ಮಾಧವ ಎಸ್. ಮಾವೆ ಆರೋಪಿಸಿದ್ದಾರೆ.
ಬಿ.ಸಿ.ರೋಡ್‌ನಲ್ಲಿ ಬುಧವಾರ ಸಂಜೆ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ನೆಲ್ಯಾಡಿ ಸಮೀಪದ ವಳಾಲು ಸೇರಿದಂತೆ ರಾಷ್ಟ್ರೀಯ ಹೆದ್ದಾರಿಗಳಲ್ಲಿ ನಿರ್ಮಾಣವಾಗುತ್ತಿರುವ ಟೋಲ್ ಗೇಟ್‌ಗಳು ಸುಸಜ್ಜಿತವಾಗಿ ನಿರ್ಮಾಣಗೊಳ್ಳುತ್ತಿವೆ. ಈ ಹಿಂದೆ ಕಾಂಗ್ರೆಸ್ ಆಡಳಿತಾವಧಿಯಲ್ಲಿ ಖಾಸಗಿ ಸಂಸ್ಥೆಯ ಮೂಲಕ ನಿರ್ಮಾಣಗೊಂಡ ಬ್ರಹ್ಮರಕೂಟ್ಲು ಟೋಲ್ ಗೇಟ್ ಅನಧಿಕೃತವಲ್ಲ. ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ ಅವರು ಇದನ್ನು ರಾಷ್ಟ್ರೀಯ ಹೆದ್ದಾರಿ ಇಲಾಖೆಯ ವ್ಯಾಪ್ತಿಗೆ ತರುವಲ್ಲಿ ಯಶಸ್ವಿಯಾಗಿದ್ದು, ಮುಂದಿನ ದಿನಗಳಲ್ಲಿ ಟೋಲ್ ಗೇಟ್ ತೆರವುಗೊಳ್ಳುವುದು ಖಚಿತ ಎಂದು ಈಗಾಗಲೇ ಸ್ಪಷ್ಟಪಡಿಸಿದ್ದಾರೆ ಎಂದರು.
ಟೋಲ್ ಗೇಟ್ ಆರಂಭವಾದ ಸಂದರ್ಭದಲ್ಲಿ ಮೌನವಾಗಿದ್ದ ಕಾಂಗ್ರೆಸ್ ನಾಯಕರು, ಇದೀಗ ತೆರವು ಖಚಿತವಾಗುತ್ತಿದ್ದಂತೆ ಎಚ್ಚೆತ್ತುಕೊಂಡು ಜವಾಬ್ದಾರಿಯಿಲ್ಲದೆ ಪ್ರತಿಭಟನೆ ನಡೆಸುತ್ತಿದ್ದಾರೆ. ಇಂತಹ
ಪ್ರತಿಭಟನೆಯ ಬದಲು ರಸ್ತೆಯುದ್ದಕ್ಕೂ ಸ್ವಚ್ಛತಾ ಆಂದೋಲನ ನಡೆಸಿದರೆ ಬಿಜೆಪಿಯವರೂ ಕೈಜೋಡಿಸಲಿದ್ದಾರೆ ಎಂದು ಹೇಳಿದರು.
ಬಿಜೆಪಿ ಕ್ಷೇತ್ರ ಪ್ರಧಾನ ಕಾರ್ಯದರ್ಶಿ ಸುದರ್ಶನ್ ಬಜ ಮಾತನಾಡಿ, ಕಾಂಗ್ರೆಸ್ ಮುಖಂಡ ಮಿಥುನ್ ರೈ ಅವರು ಪೊಲೀಸರಿಗೆ ಸವಾಲೆಸೆಯುವ ರೀತಿಯಲ್ಲಿ ಜೆಸಿಬಿ ಮೂಲಕ ಟೋಲ್ ಗೇಟ್ ತೆರವುಗೊಳಿಸುವುದಾಗಿ ಹೇಳಿಕೆ ನೀಡಿದ್ದಾರೆ. ಜಿಲ್ಲೆಯಲ್ಲಿ ದಕ್ಷ ಪೊಲೀಸ್ ವ್ಯವಸ್ಥೆ ಇದ್ದರೆ ಇಂತಹ ಹೇಳಿಕೆ ನೀಡಿದವರ ವಿರುದ್ಧ ಸ್ವಯಂಪ್ರೇರಿತ ಪ್ರಕರಣ ದಾಖಲಿಸಬೇಕು ಆಗ್ರಹಿಸಿ, ಕಾರ್ಯಕರ್ತರನ್ನು ರಸ್ತೆ ಬದಿಯಲ್ಲಿ ಅಹೋರಾತ್ರಿ ಕೂರಿಸಿ, ನಾಯಕರು ಮನೆಯಲ್ಲಿ ಆರಾಮವಾಗಿರುತ್ತಾರೆ ಎಂದರು .
ಪತ್ರಿಕಾಗೋಷ್ಟಿಯಲ್ಲಿ ಬಿಜೆಪಿ ಕ್ಷೇತ್ರ ಪ್ರಧಾನ ಕಾರ್ಯದರ್ಶಿ ಶಿವಪ್ರಸಾದ್ ಶೆಟ್ಟಿ ಹಾಗೂ ಮಾಧ್ಯಮ ಪ್ರಮುಖ ಪುರುಷೋತ್ತಮ ಶೆಟ್ಟಿ ಉಪಸ್ಥಿತರಿದ್ದರು.










