ಮಂಗಳೂರು: ಬಿಡದೇ ಸುರಿಯುತ್ತಿರುವ ಧಾರಾಕಾರ ಮಳೆಯಿಂದ ಕರ್ನಾಟಕದ ಕರಾವಳಿ ಭಾಗ ತತ್ತರಿಸಿದ್ದು, ಈ ಹಿನ್ನೆಲೆ ಇಂದು ಒಂದು ದಿನದ ಮಟ್ಟಿಗೆ ದಕ್ಷಿಣ ಕನ್ನಡ ಜಿಲ್ಲಾದ್ಯಂತ ಶಾಲೆಗಳಿಗೆ ರಜೆ ಘೋಷಿಸಲಾಗಿದೆ.
ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಡಾ.ರಾಜೇಂದ್ರ ಕೆ.ವಿ ಅವರು ರಜೆ ಆದೇಶ ಹೊರಡಿಸಿದ್ದು, ‘ಜಿಲ್ಲೆಯಲ್ಲಿ ನಿರಂತರ ಸುರಿಯುತ್ತಿರುವ ಮಳೆಯ ಕಾರಣ ಮಕ್ಕಳ ಸುರಕ್ಷತಾ ದೃಷ್ಟಿಯಿಂದ ಸರ್ಕಾರಿ, ಅನುದಾನಿತ ಹಾಗೂ ಅನುದಾನ ರಹಿತ ಪ್ರಾಥಮಿಕ ಹಾಗೂ ಪ್ರೌಢ ಶಾಲೆಗಳಿಗೆ ಮೇ.19ರ ಗುರುವಾರ ಒಂದು ದಿನ
ರಜೆ ಘೋಷಿಸಲಾಗಿದೆ’ ಎಂದು ಆದೇಶ ಹೊರಡಿಸಿದ್ದಾರೆ.
ಇಂದು ಮುಂಜಾನೆಯಿಂದಲೇ ದಕ್ಷಿಣ ಕನ್ನಡ ಜಿಲ್ಲೆಯ ಬಹುತೇಕ ಭಾಗಗಳಲ್ಲಿ ನಿರಂತರ ಮಳೆ ಸುರಿಯುತ್ತಿದ್ದು, ನಿತ್ಯ ಕೆಲಸ ಕಾರ್ಯಗಳಿಗೆ ಹೊರಡುವ ಜನರು ಬೆಳಗ್ಗೆಯೇ ಕಿರಿಕಿರಿ ಅನುಭವಿಸಿದ್ದಾರೆ. ಮತ್ತೊಂದೆಡೆ ವಾಹನ ಸವಾರರು ಕೂಡ ಮಳೆಯ ಕಾರಣದಿಂದ ಪರದಾಟ ಅನುಭವಿಸಿದ್ದಾರೆ.














