ಬಂಟ್ವಾಳ: ಮಾಜಿ ಸಚಿವ ರಮಾನಾಥ ರೈ ಅವರು ಪ್ರಯಾಣಿಸುತ್ತಿದ್ದ ಕಾರು ಅಪಘಾತಕ್ಕೀಡಾದ ಘಟನೆಗೆ ಸಂಬಂಧಿಸಿದಂತೆ ಸಾಮಾಜಿಕ ಜಾಲತಾಣದಲ್ಲಿ ಅವಾಚ್ಯ ಶಬ್ದಗಳಿಂದ ನಿಂದಿಸಿ ಬೆದರಿಕೆ ಹಾಕಿದ ಆರೋಪದಡಿ ಬಂಟ್ವಾಳ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಬಂಟ್ವಾಳ ನಗರ ಮತ್ತು ಗ್ರಾಮಾಂತರ ಯೋಜನಾ ಪ್ರಾಧಿಕಾರದ ಅಧ್ಯಕ್ಷ ಬೇಬಿ ಕುಂದರ್ (62) ಅವರು ನೀಡಿದ ದೂರಿನ ಮೇರೆಗೆ ಆರೋಪಿ ಪ್ರಭಾಕರ ಹೆಗ್ಡೆ ಎಂಬವರ ವಿರುದ್ಧ ಪ್ರಕರಣ ದಾಖಲಾಗಿದೆ.
ದೂರಿನ ಪ್ರಕಾರ, ಸೆ.20ರಂದು ಕಾರ್ಕಳ ರಾಷ್ಟ್ರೀಯ ಹೆದ್ದಾರಿ 169ರ ಸಾಣೂರು ಶ್ರೀರಾಮ ಮಂದಿರ ಡಿವೈಡರ್ ಕ್ರಾಸ್ ಬಳಿ ಮಾಜಿ ಸಚಿವ ರಮಾನಾಥ ರೈ ಅವರು ಪ್ರಯಾಣಿಸುತ್ತಿದ್ದ ಕಾರು ಅಪಘಾತಕ್ಕೀಡಾಗಿತ್ತು. ಅಪಘಾತದಲ್ಲಿ ರಮಾನಾಥ ರೈ ಸೇರಿದಂತೆ ಅವರ ಆಪ್ತ ಸಹಾಯಕರು, ಅಂಗರಕ್ಷಕರು ಹಾಗೂ
ಕಾರು ಚಾಲಕರಿಗೆ ಗಾಯಗಳಾಗಿದ್ದು, ಮಂಗಳೂರಿನ ಆಸ್ಪತ್ರೆಯಲ್ಲಿ ಒಳರೋಗಿಗಳಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ದೂರಿನಲ್ಲಿ ತಿಳಿಸಲಾಗಿದೆ.
ಈ ಅಪಘಾತದ ದೃಶ್ಯವನ್ನು ಯಾರೋ ಸಾಮಾಜಿಕ ಜಾಲತಾಣವಾದ ಫೇಸ್‌ಬುಕ್‌ನಲ್ಲಿ ಹಂಚಿಕೊಂಡಿದ್ದರು. ಆ ಪೋಸ್ಟ್‌ಗೆ ಆರೋಪಿ ಪ್ರಭಾಕರ ಹೆಗ್ಡೆ ಅವರು ಅವಾಚ್ಯ ಶಬ್ದಗಳನ್ನು ಬಳಸಿ ನಿಂದಿಸಿ ಹಾಗೂ ಬೆದರಿಕೆ ಹಾಕಿರುವುದಾಗಿ ದೂರಿನಲ್ಲಿ ಆರೋಪಿಸಲಾಗಿದೆ.
ಈ ಸಂಬಂಧ ಬಂಟ್ವಾಳ ನಗರ ಠಾಣೆಯಲ್ಲಿ ಅ.ಕ್ರ. 130/2026, ಭಾರತೀಯ ನ್ಯಾಯ ಸಂಹಿತೆ (BNS)ಯ ಕಲಂ 351(2), 352ರ ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ.











