ಬಂಟ್ವಾಳ:ಇಲ್ಲಿನ ರಾಯಿ ಗ್ರಾಮ ಪಂಚಾಯಿತಿ ನೂತನ ಅಧ್ಯಕ್ಷ-ಉಪಾಧ್ಯಕ್ಷರ ಆಯ್ಕೆ ನಡೆದು ಒಂದು ವಾರದಲ್ಲೇ ಬಿಜೆಪಿ ಭಿನ್ನಮತ ಸ್ಪೋಟಗೊಂಡಿದೆ. ಈ ಪಂಚಾಯಿತಿ ವ್ಯಾಪ್ತಿಯ ಕೊಯಿಲ ಒಂದನೇ ವಾರ್ಡ್ ಬಿಜೆಪಿ ಬೆಂಬಲಿತ ಸದಸ್ಯೆ ಪುಷ್ಪಾವತಿ ಪೂಜಾರಿ ಗುರುವಾರ ರಾಜೀನಾಮೆ ಸಲ್ಲಿಸಿದ್ದಾರೆ.
'ನಾನು ಕೊಯಿಲ ಒಂದನೇ ವಾರ್ಡ್ ನ ಬೂತ್ ಸಂಖ್ಯೆ 27 ರಲ್ಲಿ ಬಿಜೆಪಿ ಬೆಂಬಲಿತ ಚುನಾಯಿತ ಸದಸ್ಯೆಯಾಗಿದ್ದು, ನನ್ನ ವಾರ್ಡ್ ನಲ್ಲಿ ಪಂಚಾಯಿತಿ ಅಧ್ಯಕ್ಷರು ಮತ್ತು ಪಕ್ಷದ ಮುಖಂಡರು ಅನಗತ್ಯ ಹಸ್ತಕ್ಷೇಪ ನಡೆಸುತ್ತಿದ್ದಾರೆ.
ನನ್ನ ವಾರ್ಡ್ ನಲ್ಲಿ ಸರ್ಕಾರದ ಅನುದಾನದಿಂದ ರಸ್ತೆ ಅಭಿವೃದ್ಧಿ ಮತ್ತು ರಿಪೇರಿ ಮುಂತಾದ ಕಾಮಗಾರಿ ನನ್ನ ಗಮನಕ್ಕೆ ತಾರದೆ ನಡೆಸುತ್ತಿದ್ದು, ನನಗೆ
ಅವಮಾನ ಉಂಟು ಮಾಡುತ್ತಿದ್ದಾರೆ ಎಂದು ಆರೋಪಿಸಿದ್ದಾರೆ'.
ಇದರಿಂದಾಗಿ ಗ್ರಾಮ ಪಂಚಾಯತ್ ಸದಸ್ಯ ಸ್ಥಾನ ಮತ್ತು ಪಕ್ಷಕ್ಕೆ ರಾಜೀನಾಮೆ ನೀಡುತ್ತಿರುವುದಾಗಿ ತಿಳಿಸಿದ್ದಾರೆ. ಗ್ರಾಮ ಪಂಚಾಯಿತಿ ಅಧ್ಯಕ್ಷರು ಮತ್ತು ಪಿಡಿಒ ಅವರಿಗೆ ರಾಜೀನಾಮೆ ಪತ್ರ ಸಲ್ಲಿಸಿದ್ದು, ಶಾಸಕರು ಮತ್ತು ತಾಲ್ಲೂಕು ಪಂಚಾಯಿತಿ ಇಒ ಅವರಿಗೂ ರಾಜೀನಾಮೆ ಪ್ರತಿ ಸಲ್ಲಿಸಿರುವುದಾಗಿ ತಿಳಿಸಿದ್ದಾರೆ. ಈ ರಾಜೀನಾಮೆ ಪತ್ರ ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್ ಆಗಿದೆ.















