ಬಂಟ್ವಾಳ :ರಾಷ್ಟ್ರೀಯ ಸ್ವಯಂಪ್ರೇರಿತ ರಕ್ತದಾನ ದಿನಾಚರಣೆಯ ಅಂಗವಾಗಿ ಫಾದರ್ ಮುಲ್ಲರ್ ಆಸ್ಪತ್ರೆ, ತುಂಬೆ; ಫಾದರ್ ಮುಲ್ಲರ್ ನರ್ಸಿಂಗ್ ಕಾಲೇಜು, ತುಂಬೆ ಹಾಗೂ ಫಾದರ್ ಮುಲ್ಲರ್ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆ, ಕಂಕನಾಡಿ ಇವರ ಜಂಟಿ ಸಹಯೋಗದಲ್ಲಿ ನ. 25ರಂದು ಬೃಹತ್ ಸ್ವಯಂಪ್ರೇರಿತ ರಕ್ತದಾನ ಶಿಬಿರ ನಡೆಯಿತು.
ಸ್ವಯಂಪ್ರೇರಿತ ರಕ್ತದಾನದ ಮಹತ್ವವನ್ನು ಜನರಿಗೆ ತಿಳಿಸುವುದು, ರಕ್ತದಾನದ ಕುರಿತು ಇರುವ ತಪ್ಪು ಕಲ್ಪನೆಗಳನ್ನು ದೂರಮಾಡುವುದು ಹಾಗೂ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವ ಉದ್ದೇಶದಿಂದ ಶಿಬಿರ ಆಯೋಜಿಸಲಾಗಿತ್ತು.
ಬಂಟ್ವಾಳ ವಿಧಾನಸಭಾ ಕ್ಷೇತ್ರದ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಅವರು ದೀಪ ಬೆಳಗಿಸುವ ಮೂಲಕ ಕಾರ್ಯಕ್ರಮ ಉದ್ಘಾಟಿಸಿದರು. ಬಳಿಕ ಮಾತನಾಡಿದ ಅವರು, ರಕ್ತದಾನವು ಸಮಾಜದ ಮೇಲಿನ ನಮ್ಮ ಮಾನವೀಯ ಜವಾಬ್ದಾರಿಯ ಪ್ರತೀಕವಾಗಿದೆ. ರಕ್ತದಾನದ ಮೂಲಕ ಅನೇಕ ಅಮೂಲ್ಯ ಜೀವಗಳನ್ನು ಉಳಿಸುವುದರ ಜೊತೆಗೆ ಸಮಾಜದಲ್ಲಿ ಪರಸ್ಪರ ಸಹಕಾರ ಮತ್ತು ಸೇವಾ ಮನೋಭಾವವನ್ನು ಬೆಳೆಸಬಹುದು. ಪ್ರತಿಯೊಬ್ಬ ಅರ್ಹ ವ್ಯಕ್ತಿಯೂ ಸ್ವಯಂಪ್ರೇರಿತ ರಕ್ತದಾನಕ್ಕೆ ಮುಂದಾಗಬೇಕು ಎಂದು ಕರೆ ನೀಡಿದರು.
ಫಾದರ್ ಮುಲ್ಲರ್ ನರ್ಸಿಂಗ್ ಕಾಲೇಜು, ತುಂಬೆಯ ಪ್ರಾಂಶುಪಾಲರಾದ ಡಾ. ರೀನಾ ವಿಲ್ಮಾ ಫ್ರಾಂಕ್ ಅವರು ಅತಿಥಿಗಳನ್ನು ಸ್ವಾಗತಿಸಿ ರಕ್ತದಾನದ ಮಹತ್ವವನ್ನು ತಿಳಿಸಿದರು. "ನಾವು ನೀಡುವ ಒಂದು ಹನಿ ರಕ್ತವು ಮತ್ತೊಬ್ಬರ ಜೀವನದಲ್ಲಿ ಹೊಸ ಭರವಸೆ, ಸಂತೋಷ ಮತ್ತು ಸಂಭ್ರಮಕ್ಕೆ
ಕಾರಣವಾಗಬಹುದು" ಎಂಬ ಸಂದೇಶವನ್ನು ಹಂಚಿಕೊಂಡರು.
ಬಂಟ್ವಾಳ ತಾಲೂಕು ಆರೋಗ್ಯಾಧಿಕಾರಿ ಡಾ. ಅಶೋಕ್ ರೈ ಹಾಗೂ ಫಾದರ್ ಮುಲ್ಲರ್ ಆಸ್ಪತ್ರೆ, ತುಂಬೆಯ ವೈದ್ಯಕೀಯ ಅಧೀಕ್ಷಕ ಡಾ. ಕಿರಣ್ ಶೆಟ್ಟಿ ಉಪಸ್ಥಿತರಿದ್ದರು.
ಫಾದರ್ ಮುಲ್ಲರ್ ಮೆಡಿಕಲ್ ಕಾಲೇಜು ಆಸ್ಪತ್ರೆಯ ರಕ್ತನಿಧಿ ವಿಭಾಗದ ಪ್ರಾಧ್ಯಾಪಕ ಹಾಗೂ ಮುಖ್ಯಸ್ಥ ಡಾ. ಕಿರಣ್ ಪೈಲೂರು ಅವರು ರಕ್ತದಾನದ ಮಹತ್ವವನ್ನು ವಿವರಿಸಿ, ಪ್ರತಿಯೊಬ್ಬರೂ ಸ್ವಯಂಪ್ರೇರಿತ ರಕ್ತದಾನದಲ್ಲಿ ಪಾಲ್ಗೊಳ್ಳುವಂತೆ ಪ್ರೇರೇಪಿಸಿದರು. ಇದೇ ಸಂದರ್ಭದಲ್ಲಿ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದವರಿಗೆ ಸ್ವಯಂಪ್ರೇರಿತ ರಕ್ತದಾನದ ಪ್ರತಿಜ್ಞಾವಿಧಿ ಬೋಧಿಸಿದರು.
25ಕ್ಕೂ ಹೆಚ್ಚು ಬಾರಿ ರಕ್ತದಾನ ಮಾಡಿರುವ ರಾಯ್ಸ್ ಡಿಸೋಜಾ ಹಾಗೂ ವಿಲ್ಸನ್ ಜೋಯೆಲ್ ಅವರನ್ನು ವೇದಿಕೆಯಲ್ಲಿ ಗೌರವಿಸಲಾಯಿತು.
ಶಿಬಿರದಲ್ಲಿ ಫಾದರ್ ಮುಲ್ಲರ್ ಆಸ್ಪತ್ರೆ, ತುಂಬೆ ಹಾಗೂ ಫಾದರ್ ಮುಲ್ಲರ್ ನರ್ಸಿಂಗ್ ಕಾಲೇಜಿನ ಸಿಬ್ಬಂದಿ, ವಿದ್ಯಾರ್ಥಿಗಳು ಮತ್ತು ಸಾರ್ವಜನಿಕರು ಸ್ವಯಂಪ್ರೇರಿತವಾಗಿ ರಕ್ತದಾನ ಮಾಡುವ ಮೂಲಕ ಕಾರ್ಯಕ್ರಮದ ಯಶಸ್ಸಿಗೆ ಸಹಕರಿಸಿದರು.
ನಿಮ್ಮ ಒಂದು ಹನಿ ರಕ್ತ, ಮತ್ತೊಬ್ಬರ ಬದುಕಿಗೆ ಹೊಸ ಭರವಸೆ ಎಂಬ ಮಾನವೀಯ ಸಂದೇಶದೊಂದಿಗೆ ಶಿಬಿರ ಗಮನ ಸೆಳೆಯಿತು









