ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾರೀ ಮಳೆಯಾಗುತ್ತಿದೆ. ಈ ಹಿನ್ನೆಲೆಯಲ್ಲಿ ನಾಳೆ (ಜೂನ್ 27) ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಶಾಲೆಗಳಿಗೆ ರಜೆ ಘೋಷಿಸಲಾಗಿದೆ. ಅಂಗನವಾಡಿಯಿಂದ ಪ್ರೌಢ ಶಾಲೆವರೆಗೂ ರಜೆ ನೀಡಿ ಜಿಲ್ಲಾಧಿಕಾರಿ ಮುಗಿಲನ್ ಅವರು ಇಂದು (ಜೂನ್ 26) ಆದೇಶ ಹೊರಡಿಸಿದ್ದಾರೆ. ಅಲ್ಲದೇ ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಎಚ್ಚರಿಕೆ ನೀಡಿದ್ದಾರೆ. ನಿನ್ನೆ (ಜೂನ್ 25) ರಾತ್ರಿ ಇಡೀ ಮಳೆ ಸುರಿದಿದೆ. ಇದರಿಂದ ಜಿಲ್ಲೆಯಾದ್ಯಂತ ಭಾರೀ ಜನಜೀವನ ಅಸ್ತವ್ಯಸ್ತವಾಗಿದೆ. ಇನ್ನು ಇಂದು ರಾತ್ರಿ ನಾಳೆ ದಕ್ಷಿಣ ಕನ್ನಡ ಜಿಲ್ಲೆಲ್ಲಿ ಮತ್ತೆ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಹೀಗಾಗಿ ಮುಂಜಾಗ್ರತಾ ಕ್ರಮವಾಗಿ ಜಿಲ್ಲಾಧಿಕಾರಿಗಳು, ನಾಳೆ ಶಾಲೆಗಳಿಗೆ ರಜೆ ನೀಡಿದ್ದಾರೆ.
ಐದು ಜಿಲ್ಲೆಗಳಲ್ಲಿ ಮುಂದಿನ 3 ಗಂಟೆ ಭಾರಿ ಮಳೆಯ ಮುನ್ಸೂಚನೆಯನ್ನು ಭಾರತೀಯ ಹವಾಮಾನ ಇಲಾಖೆ ನೀಡಿದೆ. ದಕ್ಷಿಣ ಕನ್ನಡ, ಉತ್ತರ ಕನ್ನಡ, ಕೊಡಗು, ಮೈಸೂರು ಮತ್ತು ಹಾವೇರಿ ಜಿಲ್ಲೆಯಲ್ಲಿ ಗಂಟೆಗೆ 50 kmph ವೇಗದ
ಗಾಳಿ, ಗುಡುಗು ಸಹಿತ ಭಾರಿ ಮಳೆಯ ಮುನ್ಸೂಚನೆ ನೀಡಲಾಗಿದೆ. ಸಿಡಿಲು- ಗುಡುಗು ವೇಳೆ ಎಲೆಕ್ಟ್ರಿಕ್ ಉಪಕರಣಗಳನ್ನು ಆಫ್ ಮಾಡುವಂತೆ ಹಾಗೂ ಮಳೆ ಬರುವಾಗ ಶಿಥಿಲ ಕಟ್ಟಡ, ಮರದ ಕೆಳಗಡೆ ನಿಲ್ಲದಂತೆ ಹವಾಮಾನ ಇಲಾಖೆ ಸೂಚನೆ ನೀಡಿದೆ.









