ಬಂಟ್ವಾಳ: ಹಿಂದೂ ಸಂಘಟನೆಗಳ ಕಾರ್ಯಕರ್ತರ ವಿರುದ್ಧ ಗೂಂಡಾ ಕಾಯ್ದೆಯಡಿ ಪ್ರಕರಣ ದಾಖಲಿಸಿ ಬಂಧನ ಮುಂದುವರಿಸಿರುವುದನ್ನು ವಿರೋಧಿಸಿ ವಿಶ್ವ ಹಿಂದೂ ಪರಿಷತ್ ಹಾಗೂ ಬಜರಂಗದಳ ಮಂಗಳೂರು ಗ್ರಾಮಾಂತರ ಜಿಲ್ಲಾ ಘಟಕದ ವತಿಯಿಂದ ಸೋಮವಾರ ಬಿ.ಸಿ.ರೋಡಿನ ರಕೇಶ್ವರಿ ಸನ್ನಿಧಿ ಬಳಿ ಬೃಹತ್ ಪ್ರತಿಭಟನಾ ಸಭೆ ನಡೆಯಿತು.
ಸಾಮೂಹಿಕ ಹನುಮಾನ್ ಚಾಲೀಸ್ ಪಠಣದೊಂದಿಗೆ ಆರಂಭಗೊಂಡ ಸಭೆಯಲ್ಲಿ ವಿವಿಧ ಹಿಂದೂ ಸಂಘಟನೆಗಳ ಮುಖಂಡರು ಮಾತನಾಡಿ, ಕಾರ್ಯಕರ್ತರ ವಿರುದ್ಧದ ಕಾನೂನು ಕ್ರಮ ಹಿಂಪಡೆಯುವಂತೆ ಆಗ್ರಹಿಸಿದರು.
ಗುರುಪುರ ವಜ್ರದೇಹಿ ಮಠದ ಶ್ರೀ ರಾಜಶೇಖರಾನಂದ ಸ್ವಾಮೀಜಿ ಮಾತನಾಡಿ, ಅನಗತ್ಯ ಕಾಯ್ದೆಗಳನ್ನು ಬಳಸಿ ಹಿಂದೂ ಸಮಾಜವನ್ನು ದಮನಿಸುವ ಪ್ರಯತ್ನ ಮಾಡಬಾರದು ಎಂದರು.
ಹಿಂದೂ ಜಾಗರಣ ವೇದಿಕೆ ಪ್ರಾಂತ ಸಹಸಂಯೋಜಕ ಸತೀಶ್ ದಾವಣಗೆರೆ ಮಾತನಾಡಿ, ಅಧಿಕಾರಿಗಳು ರಾಜಕೀಯ ಪ್ರಭಾವಕ್ಕೆ ಒಳಗಾಗದೆ ಕಾನೂನಿನ ಚೌಕಟ್ಟಿನಲ್ಲಿ ಕಾರ್ಯನಿರ್ವಹಿಸಬೇಕು, ಹಿಂದೂ ಸಮಾಜದ ವಿರುದ್ಧ ತಾರತಮ್ಯ ಮಾಡಲಾಗುತ್ತಿದೆ ಎಂಬ ಭಾವನೆ ಮೂಡಿಸುವ ಬೆಳವಣಿಗೆಗಳು ಮುಂದುವರಿದರೆ ಮುಂದಿನ ದಿನಗಳಲ್ಲಿ ಎಸ್ಪಿ ಕಚೇರಿ ಚಲೋ ನಡೆಸಲಾಗುವುದು ಎಂದು ಎಚ್ಚರಿಸಿದರು.
ಬಜರಂಗದಳ ದಕ್ಷಿಣ ಪ್ರಾಂತ ಸಂಯೋಜಕ ಪ್ರಭಂಜನ್ ಸೂರ್ಯ, ಕಾರ್ಯಕರ್ತರ ವಿರುದ್ಧ ಗೂಂಡಾ ಕಾಯ್ದೆ ಬಳಕೆಯನ್ನು ಹಿಂಪಡೆಯಬೇಕು ಎಂದು ಒತ್ತಾಯಿಸಿದರು.
ವಿಹಿಂಪ-ಬಜರಂಗದಳ ಮಂಗಳೂರು ಗ್ರಾಮಾಂತರ ಜಿಲ್ಲಾ ಕಾರ್ಯಾಧ್ಯಕ್ಷ ಗೋಪಾಲ್ ಕುತ್ತಾರ್, ಕಾರ್ಯದರ್ಶಿ ಸಚಿನ್
ಮೆಲ್ಕಾರ್ ಉಪಸ್ಥಿತರಿದ್ದರು. ವಿಹಿಂಪ ಬಂಟ್ವಾಳ ತಾಲೂಕು ಅಧ್ಯಕ್ಷ ಹಾಗೂ ನ್ಯಾಯವಾದಿ ಪ್ರಸಾದ್ ಕುಮಾರ್ ರೈ ಪ್ರಾಸ್ತಾವಿಕವಾಗಿ ಮಾತನಾಡಿದರು. ಭಾಸ್ಕರ ರಾವ್ ಪ್ರೇರಣಾ ಗೀತೆ ಹಾಡಿದರು.
ಪ್ರತಿಭಟನಾ ಸಭೆಯಲ್ಲಿ ಕಲ್ಲಡ್ಕ ಪ್ರಭಾಕರ ಭಟ್, ಡಾ. ಕಮಲ ಪ್ರಭಾಕರ ಭಟ್, ಶಾಸಕರಾದ ರಾಜೇಶ್ ನಾಯ್ಕ, ಭಾಗೀರಥಿ ಮುರುಳ್ಯ, ಡಾ. ವೈ. ಭರತ್ ಶೆಟ್ಟಿ, ಉಮಾನಾಥ ಕೋಟ್ಯಾನ್, ವಿಧಾನಪರಿಷತ್ ಸದಸ್ಯ ಕಿಶೋರ್ ಕುಮಾರ್ ಪುತ್ತೂರು, ವಿಹಿಂಪ ಪ್ರಾಂತ ಸಹಕಾರ್ಯದರ್ಶಿ ಶರಣ್ ಪಂಪ್‌ವೆಲ್, ಮಾಜಿ ಶಾಸಕರಾದ ಪದ್ಮನಾಭ ಕೊಟ್ಟಾರಿ, ಸಂಜೀವ ಮಠಂದೂರು, ಸತೀಶ್ ಕುಂಪಲ, ವಿಕಾಸ್ ಪುತ್ತೂರು, ಸಂದೇಶ್ ಶೆಟ್ಟಿ ಅರೆಬೆಟ್ಟು, ಆರ್. ಚೆನ್ನಪ್ಪ ಕೋಟ್ಯಾನ್, ಸುದರ್ಶನ ಬಜ ಸಹಿತ ಹಿಂದೂ ಸಂಘಟನೆಗಳ ಮುಖಂಡರು ಹಾಗೂ ಕಾರ್ಯಕರ್ತರು ಭಾಗವಹಿಸಿದ್ದರು.
ಪ್ರತಿಭಟನೆಯ ಹಿನ್ನೆಲೆಯಲ್ಲಿ ಬಿ.ಸಿ.ರೋಡಿನಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಕೈಗೊಳ್ಳಲಾಗಿತ್ತು. ಅಡಿಷನಲ್ ಎಸ್ಪಿ ಹಾಗೂ ಡಿವೈಎಸ್ಪಿ ನೇತೃತ್ವದಲ್ಲಿ ಪೊಲೀಸ್ ಸಿಬ್ಬಂದಿ ಮತ್ತು ಕೆಎಸ್‌ಆರ್‌ಪಿ, ಡಿಎಆರ್ ತುಕಡಿಗಳನ್ನು ನಿಯೋಜಿಸಲಾಗಿತ್ತು.











