ಮಂಗಳೂರು: ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿಗೆ ಸಿಂಹಸ್ವಪ್ನವಾಗಿದ್ದ ಪುತ್ತೂರಿನ ಹಿಂದೂ ಮುಖಂಡ ಅರುಣ್ ಕುಮಾರ್ ಪುತ್ತಿಲ ಈ ಬಾರಿ ಲೋಕಸಭಾ ಚುನಾವಣೆಗೆ ಸ್ಪರ್ಧಿಸುವುದು ಖಚಿತವಾಗಿದೆ. ಬಿಜೆಪಿ ನಾಯಕರೊಂದಿಗಿನ ಮಾತುಕತೆ ವಿಫಲವಾದ ಹಿನ್ನೆಲೆಯಲ್ಲಿ ಅರುಣ್ ಕುಮಾರ್ ಪುತ್ತಿಲ ಲೋಕಸಭಾ ಚುನಾವಣೆಯಲ್ಲಿ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಲಿದ್ದಾರೆ.
ಈ ಬಗ್ಗೆ ಪುತ್ತೂರಿನಲ್ಲಿ ಪುತ್ತಿಲ ಪರಿವಾರ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ್ದು, ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದಿಂದ ಅರುಣ್ ಕುಮಾರ್ ಪುತ್ತಿಲ ಪಕ್ಷೇತರ ಅಭ್ಯರ್ಥಿಯಾಗಿ ಲೋಕಸಭಾ ಚುನಾವಣೆಗೆ ಸ್ಪರ್ಧೆ ಮಾಡುವ ಕುರಿತು ಸ್ಪಷ್ಟನೆ ನೀಡಿದ್ದಾರೆ.
ಈ ಹಿಂದೆ ಅರುಣ್ ಕುಮಾರ್ ಪುತ್ತಿಲ ಬಿಜೆಪಿ ಸೇರ್ಪಡೆಗೆ ಹಲವು ಸುತ್ತಿನ ಮಾತುಕತೆ ನಡೆದಿತ್ತು. ಅರುಣ್ ಕುಮಾರ್ ಪುತ್ತಿಲ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರರನ್ನು ಭೇಟಿಯಾಗಿದ್ದರು. ಈ ವೇಳೆ ಬಿಜೆಪಿ ಪಕ್ಷಕ್ಕೆ ಹಲವು ಬೇಡಿಕೆ ಇಟ್ಟಿದ್ದರು. ಆದರೆ ಸಾಮಾನ್ಯ ಕಾರ್ಯಕರ್ತರಾಗಿ ಬಿಜೆಪಿ ಸೇರ್ಪಡೆಗೆ ಬಿಜೆಪಿಯ ಹಿರಿಯ ನಾಯಕರು ಸೂಚಿಸಿದ್ದರು ಎನ್ನಲಾಗಿದೆ. ಸದ್ಯ ಬಿಜೆಪಿ ಮುಖಂಡರ ಜೊತೆಗಿನ ಮಾತುಕತೆ ವಿಫಲವಾದ ಹಿನ್ನೆಲೆಯಲ್ಲಿ ಲೋಕಸಭಾ ಚುನಾವಣೆಯಲ್ಲಿ ಪಕ್ಷೇತರನಾಗಿ ಸ್ಪರ್ಧಿಸಲು ಅರುಣ್ ಕುಮಾರ್ ಪುತ್ತಿಲ
ನಿರ್ಧರಿಸಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿದೆ.
ಲೋಕಸಭಾ ಚುನಾವಣೆಗೆ ಪಕ್ಷೇತರ ಅಭ್ಯರ್ಥಿಯಾಗಿ ಅರುಣ್ ಕುಮಾರ್ ಪುತ್ತಿಲ ಸ್ಪರ್ಧೆಯ ಕುರಿತು ದಕ್ಷಿಣಕನ್ನಡ ಸಂಸದ ನಳಿನ್ ಕುಮಾರ್ ಕಟೀಲ್ ಮಂಗಳೂರಿನಲ್ಲಿ ಪ್ರತಿಕ್ರಿಯಿಸಿದ್ದಾರೆ. ಪುತ್ತಿಲ ಪರಿವಾರ ಒಂದು ಸ್ವತಂತ್ರ ಸಂಸ್ಥೆಯಾಗಿದೆ. ಆ ಸಂಸ್ಥೆಗೆ ತೀರ್ಮಾನ ತೆಗೆದುಕೊಳ್ಳುವ ಸ್ವಾತಂತ್ರ್ಯ ಇದೆ. ಅರುಣ್ ಕುಮಾರ್ ಪುತ್ತಿಲ ಅವರ ಮನವೊಲಿಕೆಗೆ ಪಾರ್ಟಿ ಪ್ರಯತ್ನ ಮಾಡಿದೆ. ಭಾಜಪಾ ಬಹಳ ವರ್ಷಗಳ ಹೋರಾಟದಿಂದ ಅತೀ ದೊಡ್ಡ ಪಾರ್ಟಿಯಾಗಿ ಬೆಳೆದಿದೆ. ರಾಷ್ಟ್ರೀಯ ಪಕ್ಷ ಕಾಂಗ್ರೆಸ್ನ್ನು ಎದುರಿಸಿ ಲೋಕಸಭೆಯಲ್ಲಿ ಅತೀ ಹೆಚ್ಚು ಸೀಟು ಗೆದ್ದಿದೆ. ಪಕ್ಷಕ್ಕೆ ಎದುರಾಳಿಯ ಪ್ರಶ್ನೆಯೇ ಇಲ್ಲ ಎಂದು ಪುತ್ತಿಲ ಪರಿವಾರ ಸ್ಪರ್ಧೆಗೆ ನಳಿನ್ ಕುಮಾರ್ ಕಟೀಲ್ ಟಾಂಗ್ ನೀಡಿದರು.










