ಉಡುಪಿ: ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಕಾಶ್ಮೀರಕ್ಕೆ 370 ವಿಧಿ ಮರಳಿಸುವುದಾಗಿ ವಿವಾದಾತ್ಮಕ ಹೇಳಿಕೆ ನೀಡಿದ ದಿಗ್ವಿಜಯ್ ಸಿಂಗ್ ಒಬ್ಬ ದೇಶದ್ರೋಹಿ ಎಂದು ಉಡುಪಿ ಸಂಸದೆ ಶೋಭಾ ಕರಂದ್ಲಾಜೆ ಕಿಡಿಕಾರಿದ್ದಾರೆ.
ಉಡುಪಿಯಲ್ಲಿ ಮಾದ್ಯಮಕ್ಕೆ ಪ್ರತಿಕ್ರಿಯಿಸಿದ ಕರಂದ್ಲಾಜೆ ಅಸ್ತಿತ್ವ ಕಳೆದುಕೊಂಡ ಕಾಂಗ್ರೆಸ್ ಮಾನಸಿಕ ಸ್ಥಿಮಿತವನ್ನು ಕಳೆದುಕೊಂಡಿದೆ.ಕಾಶ್ಮೀರದ ಎಲ್ಲಾ ಸಮಸ್ಯೆಗಳಿಗೆ ಕಾಂಗ್ರೆಸ್ಸೇ ಕಾರಣ.,370ನೇ ವಿಧಿಯ ವಿರುದ್ಧ ಇಡೀ ದೇಶ ಕೂಗಿದರೂ ಕಾಂಗ್ರೆಸಿಗೆ ಕೇಳಲಿಲ್ಲ. ಕಾಶ್ಮೀರ ಶಾಂತವಾಗಿದೆ, ಜನಜೀವನ ಸಾಮಾನ್ಯವಾಗಿದೆ. ಆದರೆ ಇಂತಹ ಸಂದರ್ಭದಲ್ಲಿ ಕಾಂಗ್ರೆಸ್ ಮುಖಂಡ ದಿಗ್ವಿಜಯ್ ಸಿಂಗ್ ದೇಶದ್ರೋಹಿ ಹೇಳಿಕೆ ನೀಡಿದ್ದಾರೆ. ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಮತ್ತೆ 370ನೇ ವಿಧಿ ಜಾರಿ ಮಾಡುವುದಾಗಿ ಹೇಳಿದ್ದಾರೆ. ಇದು ಕಾಂಗ್ರೆಸ್ ಪಕ್ಷದ ಹೇಳಿಕೆಯೋ
ಅಥವಾ ದಿಗ್ವಿಜಯಸಿಂಗ್ ವೈಯಕ್ತಿಕ ಹೇಳಿಕೆಯೋ ಎಂದು ನಾಯಕರು ಸ್ಪಷ್ಟ ಪಡಿಸಬೇಕು. ವೈಯಕ್ತಿಕ ಹೇಳಿಕೆಯಾದರೆ ತಕ್ಷಣ ಪಕ್ಷದಿಂದ ಉಚ್ಚಾಟಿಸಬೇಕು ಎಂದು ಆಗ್ರಹಿಸಿದ್ದಾರೆ.
ನಿಮ್ಮದು ರಾಷ್ಟ್ರೀಯ ಕಾಂಗ್ರೆಸ್ ಅಲ್ಲ ದೇಶವಿರೋಧಿ ಕಾಂಗ್ರೆಸ್, ದಿಗ್ವಿಜಯ್ ಸಿಂಗ್ ವಿರುದ್ಧ ದೇಶದ್ರೋಹದ ಕೇಸು ದಾಖಲಿಸಬೇಕು. ದಿಗ್ವಿಜಯ್ ಸಿಂಗ್ ಹೇಳಿಕೆ ಪಕ್ಷದ ನಿಲುವು ಅಲ್ಲದಿದ್ದರೆ ಪಕ್ಷದಿಂದ ಉಚ್ಚಾಟಿಸಿ. ಇಲ್ಲದಿದ್ದರೆ ಕಾಂಗ್ರೆಸ್ ಪಕ್ಷದ ನಿಲುವು ಎಂಬುದನ್ನು ಸ್ಪಷ್ಟಪಡಿಸಿ ಎಂದು ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಅವರನ್ನು ಶೋಭಾ ಕರಂದ್ಲಾಜೆ ಆಗ್ರಹಿಸಿದ್ದಾರೆ.















