ಬೆಂಗಳೂರು: ಸುಪ್ರೀಂ ಕೋರ್ಟ್‌ನಲ್ಲಿ ವಿಚಾರಣೆ ನಡೆಯುತ್ತಿದ್ದಾಗ, ರಾಕೇಶ್ ಎಂಬ ವಕೀಲರು ನ್ಯಾಯಮೂರ್ತಿ ಬಿಆರ್ ಗವಾಯಿ ಅವರ ಮೇಲೆ ಶೂ ಎಸೆಯಲು ಯತ್ನಿಸಿದ ಘಟನೆ ನಡೆದಿದೆ. ಈ ಘಟನೆಯನ್ನು ಸಿಎಂ ಸಿದ್ದರಾಮಯ್ಯ ತೀವ್ರವಾಗಿ ಖಂಡಿಸಿದ್ದಾರೆ. ಈ ಸಂಬಂಧ ಎಕ್ಸ್ ಖಾತೆಯಲ್ಲಿ ಸಿಎಂ ಸಿದ್ದರಾಮಯ್ಯ ಬರೆದುಕೊಂಡಿದ್ದಾರೆ. ಸಿಜೆಐ ಬಿಆರ್ ಗವಾಯಿ ನೇತೃತ್ವದ ಪೀಠದ ಮುಂದೆ ಪ್ರಕರಣಗಳ ಚರ್ಚೆ ನಡೆಯುತ್ತಿದ್ದಾಗ ಈ ಘಟನೆ ಸಂಭವಿಸಿದೆ ಎಂದು ಬಾರ್ ಆಂಡ್ ಬೆಂಚ್ ವರದಿ ಮಾಡಿದೆ. ಇಂತಹ ಘಟನೆಗಳಿಂದ ವಿಚಲಿತರಾಗಬೇಡಿ ಮತ್ತು ತಾವು ವಿಚಲಿತರಾಗುವುದಿಲ್ಲ ಎಂದು ನ್ಯಾಯಮೂರ್ತಿ ಬಿಆರ್ ಗವಾಯಿ ಪ್ರತಿಕ್ರಿಯಿಸಿದ್ದಾರೆ.
ಈ ಬಗ್ಗೆ ಸಿಎಂ ಸಿದ್ದರಾಮಯ್ಯ ಹೇಳಿದ್ದೇನು?
ಸುಪ್ರೀಂ ಕೋರ್ಟ್ ನ ಮುಖ್ಯನ್ಯಾಯಮೂರ್ತಿಗಳಾಗಿರುವ ಬಿ.ಆರ್.ಗವಾಯಿ ಅವರಿಗೆ ವಕೀಲನೊಬ್ಬ ಶೂ ಎಸೆದು ಅವಮಾನ ಮಾಡಿರುವ ಘಟನೆಯನ್ನು ನಾನು ತೀವ್ರವಾಗಿ ಖಂಡಿಸುತ್ತೇನೆ. ಮುಖ್ಯನ್ಯಾಯಮೂರ್ತಿಗಳು ಮತ್ತು ನ್ಯಾಯಾಲಯಕ್ಕೆ ಅವಮಾನ ಮಾಡಿರುವ ಕಿಡಿಗೇಡಿ ವಕೀಲನನ್ನು ತಕ್ಷಣ ಬಂಧಿಸಿ ಕಾನೂನು ಕ್ರಮಕೈಗೊಳ್ಳಬೇಕೆಂದು
ಆಗ್ರಹಪಡಿಸುತ್ತೇನೆ.
ದಲಿತ ಸಮುದಾಯಕ್ಕೆ ಸೇರಿರುವ ನ್ಯಾಯಮೂರ್ತಿ ಬಿ.ಆರ್.ಗವಾಯಿ ಅವರು ಸಾಮಾಜಿಕ ಪ್ರತಿರೋಧಗಳನ್ನು ಎದುರಿಸಿ ಅರ್ಹತೆ ಮತ್ತು ಸಾಧನೆ ಮೂಲಕ ಉನ್ನತ ಸ್ಥಾನಕ್ಕೇರಿದವರು. ಜಾತಿ ಮೂಲದ ಅಸಮಾನತೆ ಮತ್ತು ಅಸಹನೆ ಸಂವಿಧಾನ ಜಾರಿಗೆ ಬಂದ 75 ವರ್ಷಗಳ ನಂತರವೂ ಮನುವಾದಿಗಳ ಮನಸ್ಸಲ್ಲಿ ಭಧ್ರವಾಗಿ ಉಳಿದುಕೊಂಡಿದೆ ಎನ್ನುವುದಕ್ಕೆ ಇಂದಿನ ಘಟನೆ ಸಾಕ್ಷಿಯಾಗಿದೆ.















