ಮದ್ಯನೀತಿ ಪ್ರಕರಣದಲ್ಲಿ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಬಂಧನಕ್ಕೆ ಕಾಂಗ್ರೆಸ್ ಖಂಡನೆ.ಎಎಪಿಯಿಂದ ಇಂದು ಬಿಜೆಪಿ ವಿರುದ್ಧ ರಾಷ್ಟ್ರವ್ಯಾಪಿ ಪ್ರತಿಭಟನೆ.

Coastal Bulletin
ಮದ್ಯನೀತಿ ಪ್ರಕರಣದಲ್ಲಿ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಬಂಧನಕ್ಕೆ ಕಾಂಗ್ರೆಸ್ ಖಂಡನೆ.ಎಎಪಿಯಿಂದ ಇಂದು ಬಿಜೆಪಿ ವಿರುದ್ಧ ರಾಷ್ಟ್ರವ್ಯಾಪಿ ಪ್ರತಿಭಟನೆ.

ನವದೆಹಲಿ: ದೆಹಲಿ ಮದ್ಯ ನೀತಿ ಹಗರಣಕ್ಕೆ ಸಂಬಂಧಿಸಿದಂತೆ ವ್ಯಾಪಕ ಭ್ರಷ್ಟಾಚಾರ ಆರೋಪದ ಮೇಲೆ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರನ್ನು ನಿನ್ನೆ ಜಾರಿ ನಿರ್ದೇಶನಾಲಯ (ಇಡಿ) ಅಧಿಕಾರಿಗಳು ಬಂಧಿಸಿದ್ದಾರೆ. ಬಂಧನಕ್ಕೊಳಗಾಗಿರುವ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರ ಕುಟುಂಬದವರನ್ನು ಇಂದು ಕಾಂಗ್ರೆಸ್​ ನಾಯಕ ರಾಹುಲ್ ಗಾಂಧಿ ಭೇಟಿಯಾಗಲಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿದೆ. ಬಂಧನದ ಕುರಿತು ಪ್ರತಿಕ್ರಿಯಿಸಿದ ದೆಹಲಿ ಸಚಿವ ಮತ್ತು ಆಮ್ ಆದ್ಮಿ ಪಕ್ಷದ ನಾಯಕ ಅತಿಶಿ, ಜಾರಿ ನಿರ್ದೇಶನಾಲಯದ ಹಿಂದೆ ರಾಜಕೀಯ ಮಾಡುವುದನ್ನು ಬಿಜೆಪಿ ನಿಲ್ಲಿಸುವಂತೆ ಕೇಳಿಕೊಂಡರು.

ಬಿಜೆಪಿ ಪ್ರಜಾಪ್ರಭುತ್ವವನ್ನು ಕೊಲೆ ಮಾಡುತ್ತಿದೆ, ಅವರು ಇಬ್ಬರು ವಿರೋಧ ಪಕ್ಷದ ಮುಖ್ಯಮಂತ್ರಿಗಳನ್ನು ( ಜಾರ್ಖಂಡ್ ಸಿಎಂ ಹೇಮಂತ್ ಸೊರೆನ್ ಅವರನ್ನು ಜೈಲಿಗೆ ಹಾಕಿದ್ದಾರೆ ಮತ್ತು ಈಗ ಇನ್ನೊಬ್ಬರು ಕೇಜ್ರಿವಾಲ್) ಅವರನ್ನು ಬಂಧಿಸಿದ್ದಾರೆ ಮತ್ತು ಪಕ್ಷದ ಬ್ಯಾಂಕ್ ಖಾತೆಯನ್ನು ಸ್ಥಗಿತಗೊಳಿಸಿದ್ದಾರೆ. ಇವೆಲ್ಲಾ ಮಾಡಿ ಚುನಾವಣೆ ಗೆಲ್ಲಬಹುದು ಎಂದು ಬಿಜೆಪಿ ಅಂದುಕೊಂಡಿರಬೇಕು ಎಂದು ಅತಿಶಿ ಹೇಳಿದ್ದಾರೆ.

ಕೇಜ್ರಿವಾಲ್ ಅವರ ಬಂಧನವನ್ನು ರದ್ದುಗೊಳಿಸಲು ಸುಪ್ರೀಂ ಕೋರ್ಟ್‌ಗೆ ಮನವಿ ಮಾಡಿದ್ದೇವೆ ಮತ್ತು ತುರ್ತು ವಿಚಾರಣೆಯನ್ನು ಕೋರಿದ್ದೇವೆ ಎಂದು ಅತಿಶಿ ಹೇಳಿದರು. ಇದೇ ವೇಳೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಕೇಜ್ರಿವಾಲ್ ಕುಟುಂಬದೊಂದಿಗೆ ದೂರವಾಣಿಯಲ್ಲಿ ಮಾತನಾಡಿದರು. ಇಡೀ ಕಾಂಗ್ರೆಸ್

ಪಕ್ಷ ನಿಮ್ಮೊಂದಿಗಿದೆ ಎಂದು ಕುಟುಂಬಕ್ಕೆ ಭರವಸೆ ನೀಡಿದರು. ಕಾನೂನು ನೆರವು ನೀಡಬಹುದು ಎಂದು ಅಂದಾಜಿಸಲಾಗಿದೆ.


ಈಗಾಗಲೇ ಮದ್ಯ ನೀತಿ ಹಗರಣದಲ್ಲಿ ದೆಹಲಿಯ ಮಾಜಿ ಮುಖ್ಯಮಂತ್ರಿ ಮನೀಶ್​ ಸಿಸೋಡಿಯಾ, ಸಂಸದ ಸಂಜಯ್ ಸಿಂಗ್ ಈಗಾಗಲೇ ಜೈಲಿನಲ್ಲಿದ್ದಾರೆ

ಈ ಕ್ರಮ ಖಂಡಿಸಿ ಇಂದು ಬಿಜೆಪಿ ವಿರುದ್ಧ ರಾಷ್ಟ್ರವ್ಯಾಪಿ ಪ್ರತಿಭಟನೆ ನಡೆಸಲಾಗುವುದು ಎಂದು ಆಮ್‌ ಆದ್ಮಿ ಪಕ್ಷ (ಎಎಪಿ) ತಿಳಿಸಿದೆ.''ಬಿಜೆಪಿ ಕೇಂದ್ರದ ತನಿಖಾ ಸಂಸ್ಥೆಗಳನ್ನು ಕಳುಹಿಸಿ ಅರವಿಂದ್ ಕೇಜ್ರಿವಾಲ್‌ರನ್ನು ಬಂಧಿಸಿದೆ. ಇದು ಪ್ರಜಾಪ್ರಭುತ್ವದ ಕೊಲೆ. ಬೆಳಿಗ್ಗೆ 10ಕ್ಕೆ ದೆಹಲಿಯಲ್ಲಿ ಬಿಜೆಪಿ ವಿರುದ್ಧ ಪ್ರತಿಭಟನೆ ನಡೆಸುತ್ತೇವೆ'' ಎಂದು ದೆಹಲಿ ಸಚಿವ ಗೋಪಾಲ್ ರೈ ಹೇಳಿದರು.

Leave a Comment