ಹೊಸದಿಲ್ಲಿ: ಲೋಕಸಭೆ ಚುನಾವಣೆಗೆ ಚುನಾವಣಾ ಆಯೋಗವು ಮಾರ್ಚ್ ತಿಂಗಳಲ್ಲಿ ವೇಳಾಪಟ್ಟಿ ಪ್ರಕಟಿಸುವ ನಿರೀಕ್ಷೆ ಇದೆ. ಅದಕ್ಕೂ ಮುನ್ನ ಬಿಜೆಪಿ ಇಂದು ತನ್ನ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ ಮಾಡುವ ಸಾಧ್ಯತೆಯಿದೆ. ಸುಮಾರು 100 ಅಭ್ಯರ್ಥಿಗಳ ಹೆಸರನ್ನು ಭಾರತೀಯ ಜನತಾ ಪಕ್ಷ ಪ್ರಕಟಿಸಲಿದೆ ಎಂದು ಹೇಳಲಾಗುತ್ತಿದೆ. ಮೊದಲ ಪಟ್ಟಿಯಲ್ಲಿ ಬಿಜೆಪಿಯ ದಿಗ್ಗಜರಾದ ಪ್ರಧಾನಿ ನರೇಂದ್ರ ಮೋದಿ ಮತ್ತು ಗೃಹ ಸಚಿವ ಅಮಿತ್ ಶಾ ಇಬ್ಬರ ಹೆಸರೂ ಇರಲಿದೆ ಎಂದು ಮೂಲಗಳು ತಿಳಿಸಿವೆ.
ಬಿಜೆಪಿಯ ಕೇಂದ್ರ ಚುನಾವಣಾ ಸಮಿತಿಯು ಇಂದು ಸಭೆ ಸೇರಲಿದೆ. ಅದರ ಬಳಿಕ ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಬಿಡುಗಡೆ ಮಾಡಲಿದೆ ಎಂದು ಎನ್ಡಿಟಿವಿ ವರದಿ ಮಾಡಿದೆ. 543 ಸಂಸತ್ ಸ್ಥಾನಗಳಲ್ಲಿ 370 ಸೀಟುಗಳನ್ನು ಗೆಲ್ಲುವ ಹಾಗೂ ಎನ್ಡಿಎ ಮೈತ್ರಿಕೂಟದ ಒಟ್ಟು ಸೀಟುಗಳನ್ನು 400ರ ಗಡಿ ದಾಟಿಸುವ ಬೃಹತ್ ಗುರಿಯನ್ನು ಹೊಂದಿರುವುದರಿಂದ ಆಡಳಿತಾರೂಢ ಬಿಜೆಪಿಗೆ ಮೊದಲ
ಪಟ್ಟಿ ನಿರ್ಣಾಯಕವಾಗಿದೆ.
ಜೆಡಿಎಸ್ಗೆ ಯಾವ ಯಾವ ಕ್ಷೇತ್ರಗಳನ್ನು ಬಿಟ್ಟುಕೊಡಬೇಕು ಎಂಬುದರ ನಂತರ ಉಳಿದ ಕ್ಷೇತ್ರಗಳಿಗೆ ರಾಜ್ಯ ನಾಯಕರೊಂದಿಗೆ ಚರ್ಚಿಸಿ ಬಿಜೆಪಿ ವರಿಷ್ಠರು ಪಟ್ಟಿಯನ್ನು ಬಿಡುಗಡೆ ಮಾಡಲಿದ್ದಾರೆ ಎಂದು ಮೂಲಗಳು ಖಚಿತಪಡಿಸಿವೆ. 29ರಂದು ನಡೆಯಲಿರುವ ಚುನಾವಣಾ ಸಮಿತಿ ಸಭೆಯಲ್ಲಿ ರಾಜ್ಯದಿಂದ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ, ಪಕ್ಷದ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿ.ಎಲ್.ಸಂತೋಷ್ ಅವರುಗಳು ಭಾಗವಹಿಸಲಿದ್ದಾರೆ.









