ನವದೆಹಲಿ: ಬಾಂಗ್ಲಾದೇಶದಲ್ಲಿ ನಡೆಯುತ್ತಿರುವ ಹಿಂದೂಗಳು ಸೇರಿದಂತೆ ಇತರೆ ಧಾರ್ಮಿಕ ಅಲ್ಪಸಂಖ್ಯಾತರ ಮೇಲಿನ ಹಿಂಸಾಚಾರದ ಕುರಿತು ರಾಷ್ಟ್ರೀಯ ಸ್ವಯಂಸೇವಕ ಸಂಘದ ಸರಕಾರ್ಯವಾಹ ದತ್ತಾತ್ರೇಯ ಹೊಸಬಾಳೆ ಮಾತನಾಡಿ, ಬಾಂಗ್ಲಾದೇಶದಲ್ಲಿ ಕಳೆದ ಕೆಲವು ದಿನಗಳಿಂದ ನಡೆಯುತ್ತಿರುವ ಅಧಿಕಾರ ಬದಲಾವಣೆಯ ಆಂದೋಲನದ ಸಂದರ್ಭದಲ್ಲಿ ಹಿಂದೂಗಳು, ಬೌದ್ಧರು ಮತ್ತು ಇತರ ಅಲ್ಪಸಂಖ್ಯಾತ ಸಮುದಾಯಗಳ ಮೇಲೆ ನಡೆಯುತ್ತಿರುವ ಹಿಂಸಾಚಾರದ ಘಟನೆಗಳ ಬಗ್ಗೆ ರಾಷ್ಟ್ರೀಯ ಸ್ವಯಂಸೇವಕ ಸಂಘವು ತೀವ್ರ ಕಳವಳ ವ್ಯಕ್ತಪಡಿಸಿದೆ ಎಂದಿದ್ದಾರೆ.
ಇಂತಹ ಘಟನೆಗಳನ್ನು ತಡೆಯಲು ಬಾಂಗ್ಲಾದೇಶದ ಹಂಗಾಮಿ ಸರ್ಕಾರ ತಕ್ಷಣ ಕಠಿಣ ಕ್ರಮ ಕೈಗೊಳ್ಳಬೇಕು ಮತ್ತು ಸಂತ್ರಸ್ತರ ಪ್ರಾಣ, ಆಸ್ತಿ ಮತ್ತು ಗೌರವವನ್ನು ರಕ್ಷಿಸಲು ಸೂಕ್ತ ವ್ಯವಸ್ಥೆ ಮಾಡಬೇಕು ಎಂದು ರಾಷ್ಟ್ರೀಯ ಸ್ವಯಂಸೇವಕ ಸಂಘದ ದತ್ತಾತ್ರೇಯ ಹೊಸಬಾಳೆ ಒತ್ತಾಯಿಸಿದ್ದಾರೆ.
ಬಾಂಗ್ಲಾದೇಶದಲ್ಲಿ ಹಿಂಸಾತ್ಮಕ ವಿದ್ಯಾರ್ಥಿ ಚಳವಳಿಯ ನಂತರ, ಪ್ರಧಾನಿ ಶೇಖ್ ಹಸೀನಾ ರಾಜೀನಾಮೆ ನೀಡಬೇಕಾಯಿತು. ಅವರು ಪ್ರಸ್ತುತ ಭಾರತದಲ್ಲಿ ಆಶ್ರಯ ಪಡೆದಿದ್ದಾರೆ. ಬಾಂಗ್ಲಾದೇಶದ ಹಿಂಸಾಚಾರದಲ್ಲಿ ಹಲವಾರು ಹಿಂದೂ ದೇವಾಲಯಗಳು, ಮನೆಗಳು ಮತ್ತು ವ್ಯಾಪಾರಗಳನ್ನು ಧ್ವಂಸಗೊಳಿಸಲಾಗಿದೆ.
ಹಿಂಸಾಚಾರದ ನಡುವೆ ನೊಬೆಲ್ ಪ್ರಶಸ್ತಿ ವಿಜೇತ ಮೊಹಮ್ಮದ್ ಯೂನಸ್ ಅವರು ಶೇಖ್ ಹಸೀನಾ ಅವರ ಬದಲಿಗೆ ಬಾಂಗ್ಲಾದೇಶದ ಮಧ್ಯಂತರ ಸರ್ಕಾರದ ಮುಖ್ಯಸ್ಥರಾಗಿ ಗುರುವಾರ ಪ್ರಮಾಣ ವಚನ ಸ್ವೀಕರಿಸಿದರು.
ಕಳೆದ ಕೆಲವು ದಿನಗಳಿಂದ ಬಾಂಗ್ಲಾದೇಶದಲ್ಲಿ ಅಧಿಕಾರ ಬದಲಾವಣೆಯ ಆಂದೋಲನದ ಸಂದರ್ಭದಲ್ಲಿ ಹಿಂದೂ, ಬೌದ್ಧ ಮತ್ತು ಇತರ ಅಲ್ಪಸಂಖ್ಯಾತ ಸಮುದಾಯಗಳ ಮೇಲೆ ನಡೆಯುತ್ತಿರುವ ಹಿಂಸಾಚಾರದ ಘಟನೆಗಳ ಬಗ್ಗೆ ರಾಷ್ಟ್ರೀಯ ಸ್ವಯಂಸೇವಕ ಸಂಘವು ತೀವ್ರ ಕಳವಳ ವ್ಯಕ್ತಪಡಿಸುತ್ತದೆ ಎಂದು ದತ್ತಾತ್ರೇಯ ಹೊಸಬಾಳೆ ಅವರು ಹೊರಡಿಸಿದ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
















