T20 World Cup 2024: ಟಿ20 ವಿಶ್ವಕಪ್ನ 2ನೇ ಸೆಮಿಫೈನಲ್ನಲ್ಲಿ ಟೀಮ್ ಇಂಡಿಯಾ ಭರ್ಜರಿ ಜಯ ಸಾಧಿಸಿದೆ. ಗಯಾನಾದ ಪ್ರೊವಿಡೆನ್ಸ್ ಸ್ಟೇಡಿಯಂನಲ್ಲಿ ನಡೆದ ಈ ಪಂದ್ಯದಲ್ಲಿ ಟಾಸ್ ಗೆದ್ದ ಇಂಗ್ಲೆಂಡ್ ತಂಡವು ಬೌಲಿಂಗ್ ಆಯ್ದುಕೊಂಡಿತ್ತು. ಅದರಂತೆ ಮೊದಲು ಬ್ಯಾಟ್ ಮಾಡಿದ ಟೀಮ್ ಇಂಡಿಯಾ ಪರ ರೋಹಿತ್ ಶರ್ಮಾ (57) ಅರ್ಧಶತಕ ಬಾರಿಸಿದರೆ, ಸೂರ್ಯಕುಮಾರ್ ಯಾದವ್ 47 ರನ್ಗಳ ಕೊಡುಗೆ ನೀಡಿದರು. ಈ ಭರ್ಜರಿ ಇನಿಂಗ್ಸ್ಗಳ ನೆರವಿನಿಂದ ಭಾರತ ತಂಡವು 20 ಓವರ್ಗಳಲ್ಲಿ 7 ವಿಕೆಟ್ ಕಳೆದುಕೊಂಡು 171 ರನ್ ಕಲೆಹಾಕಿತು.
172 ರನ್ಗಳ ಗುರಿಯನ್ನು ಬೆನ್ನತ್ತಿದ ಇಂಗ್ಲೆಂಡ್ ತಂಡವನ್ನು 16.4 ಓವರ್ಗಳಲ್ಲಿ 103 ರನ್ಗಳಿಗೆ ಆಲೌಟ್ ಮಾಡುವ ಮೂಲಕ ಟೀಮ್ ಇಂಡಿಯಾ 68 ರನ್ಗಳ ಅಮೋಘ ಜಯ ಸಾಧಿಸಿದೆ. ಈ ಗೆಲುವಿನೊಂದಿಗೆ ಭಾರತ ತಂಡವು ಫೈನಲ್ಗೆ ಲಗ್ಗೆಯಿಟ್ಟಿದೆ.
ಈ ಗೆಲುವಿನ ಬಳಿಕ ಮಾತನಾಡಿದ ಟೀಮ್ ಇಂಡಿಯಾ ನಾಯಕ ರೋಹಿತ್ ಶರ್ಮಾ, ಭಾರತ ತಂಡದ
ಪ್ರದರ್ಶನಕ್ಕೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ನಿರ್ಣಾಯಕ ಪಂದ್ಯದಲ್ಲಿ ಗೆದ್ದಿರುವುದು ಖುಷಿ ನೀಡಿದೆ. ನಮ್ಮ ಗೆಲುವಿಗೆ ಪ್ರಮುಖ ಕಾರಣ ಸಾಂಘಿಕ ಪ್ರಯತ್ನ. ಇಲ್ಲಿ ಪ್ರತಿಯೊಬ್ಬರೂ ಉತ್ತಮ ಕೊಡುಗೆ ನೀಡಿದ್ದಾರೆ. ನಾವು ಪರಿಸ್ಥಿತಿಗೆ ಚೆನ್ನಾಗಿ ಹೊಂದಿಕೊಂಡಿದ್ದೇವೆ ಎಂಬುದು ನನ್ನ ಭಾವನೆ ಎಂದು ಅಭಿಪ್ರಾಯ ವ್ಯಕ್ತಪಡಿಸಿದರು.
ನಾಳೆ ಫೈನಲ್ ಪಂದ್ಯದಲ್ಲಿ ಭಾರತ ಹಾಗೂ ಸೌತ್ ಆಫ್ರಿಕಾ ಮುಖಾಮುಖಿಯಾಗಲಿವೆ.









