Coastal Bulletin

ಬೆಂಗಳೂರು: 7ನೇ ವೇತನ ಆಯೋಗ ಜಾರಿಗೊಳಿಸಿ ಶೇ.40ರಷ್ಟು ವೇತನ ಹೆಚ್ಚಳ ಮಾಡುವಂತೆ ಆಗ್ರಹಿಸಿ ಮುಷ್ಕರ ನಡೆಸುತ್ತಿರುವ ಸರ್ಕಾರಿ ನೌಕರರ ಬೇಡಿಕೆಗೆ ರಾಜ್ಯ ಸರ್ಕಾರ ಸ್ಪಂದಿಸಿದೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಹಣಕಾಸು ಇಲಾಖೆ ಅಧಿಕಾರಿಗಳ ಜತೆ ಸಭೆ ನಡೆಸಿ ವೇತನ ಏರಿಕೆಗೆ ನಿರ್ಧಾರ ಕೈಗೊಂಡಿದೆ. ಸರ್ಕಾರಿ ನೌಕರರ ಮೂಲ ವೇತನದಲ್ಲಿ ಶೇ.17ರಷ್ಟು ಹೆಚ್ಚಳ ಮಾಡಲು ಸರ್ಕಾರ ಆದೇಶ ಹೊರಡಿಸಿದೆ.

ರೇಸ್ ಕೋರ್ಸ್ ಬಳಿಯ ಸರ್ಕಾರಿ ನಿವಾಸದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಹಣಕಾಸು ಇಲಾಖೆ ಅಧಿಕಾರಿಗಳ ಜತೆ ಸಭೆ ನಡೆಸಿದರು. ಸಭೆ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಮುಖ್ಯಮಂತ್ರಿಗಳು, ಸರ್ಕಾರಿ ನೌಕರರ ವೇತನ ಶೇ.17ರಷ್ಟು ಹೆಚ್ಚಳ ಮಾಡಲು ನಿರ್ಧರಿಸಲಾಗಿದ್ದು, ಈ ಕುರಿತು ಆದೇಶ ಹೊರಡಿಸಲಾಗುವುದು ಎಂದು ಹೇಳಿದರು.

ಮಂಗಳವಾರ ಸರ್ಕಾರಿ ನೌಕರರ ಬೇಡಿಕೆಗಳನ್ನು ಆಲಿಸಿದ ನಂತರ ಹಣಕಾಸು ಇಲಾಖೆ ಅಧಿಕಾರಿಗಳ ಜೊತೆ ಮಾತುಕತೆ ನಡೆಸಿದ್ದು, ಈ ವೇಳೆ ಒಂದು ಒಪ್ಪಂದಕ್ಕೆ ಬಂದಿದ್ದೇವೆ. ಶೇ.17ರಷ್ಟು ವೇತನ ಹೆಚ್ಚಳಕ್ಕೆ (ಮೂಲ

ವೇತನದಲ್ಲಿ) ಒಪ್ಪಿಗೆ ನೀಡಲಾಗಿದೆ ಎಂದು ಹೇಳಿದರು.

ಎನ್‌ಪಿಎಸ್‌ (NPS) ರದ್ದು ಕುರಿತು ಪರಾಮರ್ಶೆ ಮಾಡಲಾಗುವುದು

ಎನ್‌ಪಿಎಸ್ (NPS) ರದ್ದು ಬಗ್ಗೆ ಸಮಿತಿ ರಚನೆ ಬಳಿಕ ಸರ್ಕಾರದಿಂದ ಮಹತ್ವದ ನಿರ್ಣಯ ಕೈಗೊಳ್ಳಲಾಗುವುದು. ರಾಷ್ಟ್ರೀಯ ಪಿಂಚಣಿ ಯೋಜನೆ ರದ್ದು ಮಾಡುವ ಬೇಡಿಕೆಯನ್ನು ಪರಿಶೀಲನೆ ಮಾಡುತ್ತೇವೆ. ಎಸಿಎಸ್ ನೇತೃತ್ವದಲ್ಲಿ ಸಮಿತಿ ರಚಿಸುತ್ತೇವೆ. ಬೇರೆ ರಾಜ್ಯಗಳಲ್ಲಿ ಯಾವ ರೀತಿ ಪರಿಸ್ಥಿತಿ ಇದೆ ಎಂದು ಅಧ್ಯಯನ ನಡೆಸಿ ವರದಿ ಕೊಡಲು ಸೂಚಿಸುತ್ತೇವೆ ಎಂದರು.

ಈ ಮಧ್ಯೆ ಸರಕಾರಿ ನೌಕರರ ಸಂಘ ಅಧಿಕೃತವಾಗಿ ತಮ್ಮ ಮುಷ್ಕರವನ್ನು ಹಿಂಪಡೆದಿದೆ.

Leave a Comment