ಮಂಗಳೂರು: ಸೋಮೇಶ್ವರ ಬೀಚ್‌ನಲ್ಲಿ ನಡೆದ ನೈತಿಕ ಪೊಲೀಸ್ ಗಿರಿ ಪ್ರಕರಣ ಸಂಬಂಧಿಸಿ ಉಳ್ಳಾಲ ಪೊಲೀಸರು ಅಪ್ರಾಪ್ತ ಸೇರಿ ಐವರು ಆರೋಪಿಗಳನ್ನು ಬಂಧಿಸಿದ್ದಾರೆ. ಬಂಧಿತರೆಲ್ಲರೂ ಹಿಂದೂ ಸಂಘಟನೆಯ ಕಾರ್ಯಕರ್ತರಾಗಿದ್ದು, ಇವರ ವಿರುದ್ಧ ಕೊಲೆಯತ್ನ ಪ್ರಕರಣ ದಾಖಲಾಗಿದೆ.
ಉಳ್ಳಾಲ ಪೊಲೀಸ್ ಠಾಣೆಯಲ್ಲಿ ವಿದ್ಯಾರ್ಥಿಗಳ ದೂರಿನಡಿ ಎಫ್ಐಆರ್ ದಾಖಲಾಗಿತ್ತು. ಮಂಗಳೂರು ಹೊರವಲಯದ ಸೋಮೇಶ್ವರ ಬೀಚ್ ನಲ್ಲಿ ನಡೆದಿದ್ದ ಘಟನೆ ಇದಾಗಿದ್ದು, ಕೇರಳ ಮೂಲದ ಮೂವರು ವಿದ್ಯಾರ್ಥಿಗಳ ಮೇಲೆ ಹಲ್ಲೆ ಮಾಡಲಾಗಿತ್ತು. ಜಾಫರ್ ಶರೀಫ್, ಮುಜೀಬ್ ಮತ್ತು ಆಶೀಕ್ ಮೇಲೆ ಹಲ್ಲೆ ನಡೆಸಲಾಗಿತ್ತು. ಮೂವರು ವಿದ್ಯಾರ್ಥಿನಿಯರು ಹಾಗೂ ಮೂವರು ವಿದ್ಯಾರ್ಥಿಗಳ ಮೇಲೆ ತಂಡ ದಾಳಿ ನಡೆಸಿತ್ತು. ಮೂವರು ಯುವಕರು ಮುಸ್ಲಿಂ ಸಮುದಾಯಕ್ಕೆ ಸೇರಿದವರೆಂದು ತಂಡವೊಂದು ಹಿಂಬಾಲಿಸಿ ಹಿಂದೂ ವಿದ್ಯಾರ್ಥಿನಿಯರ ಜೊತೆ ಬಂದಿದ್ದ ಕಾರಣಕ್ಕೆ ನೈತಿಕ ಪೊಲೀಸ್ ಗಿರಿ ನಡೆಸಿತ್ತು. ಕೇರಳದ ಕಣ್ಣೂರಿನ ಯುವಕರು ಹಾಗೂ ಕಾಸರಗೋಡಿನ ಯುವತಿಯರು ಎನ್ನಲಾಗಿದೆ. ಮೂವರು ವಿದ್ಯಾರ್ಥಿಗಳು ಗಾಯಗೊಂಡಿದ್ದು, ದೇರಳಕಟ್ಟೆ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.