ಚಿಕ್ಕಮಗಳೂರು : ಸಂಸದೆ ಶೋಭಾ ಕರಂದ್ಲಾಜೆ ವಿರುದ್ಧ ಗೋ ಬ್ಯಾಕ್ ಚಳವಳಿ ತೀವ್ರಗೊಂಡಿದ್ದು, ಕಾರ್ಯಕರ್ತರು ಪಕ್ಷದ ಕಚೇರಿ ಗದ್ದಲ ಎಬ್ಬಿಸಿ ಆಕ್ರೋಶ ವ್ಯಕ್ತಪಡಿಸಿದರು. ಶಾಸಕ ಆರಗ ಜ್ಞಾನೇಂದ್ರ, ಮುಖಂಡ ಭಾನು ಪ್ರಕಾಶ್ ಸೇರಿ ಹಲವು ಮುಖಂಡರ ನೇತೃತ್ವದಲ್ಲಿ ಚುನಾವಣಾ ನಿರ್ವಹಣಾ ಸಮಿತಿ ಸಭೆ ಭಾನುವಾರ ಚಿಕ್ಕಮಗಳೂರಿನಲ್ಲಿ ನಡೆಯುತ್ತಿತ್ತು. ಈ ವೇಳೆ ವೇದಿಕೆ ಬಳಿಗೆ ಬಂದ ಕಾರ್ಯಕರ್ತರು, 'ಶೋಭಾ ಕರಂದ್ಲಾಜೆ ಅವರನ್ನು ಅಭ್ಯರ್ಥಿ ಮಾಡಬಾರದು. ಚಿಕ್ಕಮಗಳೂರು ಜಿಲ್ಲೆಯವರಿಗೇ ಟಿಕೆಟ್ ನೀಡಬೇಕು. ಹತ್ತು ವರ್ಷಗಳಿಂದ ಸಂಸದೆಯಾಗಿರುವ ಶೋಭಾ ಅವರಿಗೆ ಪಕ್ಷದ ಬ್ಲಾಕ್ ಸಮಿತಿ ಮುಖಂಡರ ಪರಿಚಯವೇ ಇಲ್ಲ' ಎಂದು ಆಕ್ರೋಶ ವ್ಯಕ್ತಪಡಿಸಿದರು. ಬಳಿಕ ಸ್ಥಳಕ್ಕೆ ಬಂದ ಸಿ.ಟಿ.ರವಿ, 'ನಮ್ಮ ವೈಮಸ್ಸಿನಿಂದ ದೇಶಕ್ಕೆ ಆಪತ್ತು ಬರಬಾರದು. ಯಾರೇ ಅಭ್ಯರ್ಥಿಯಾದರೂ ಮೋದಿಯವರೇ ಅಭ್ಯರ್ಥಿ ಎಂದು ಭಾವಿಸಿ' ಎಂದು ಮನವಿ ಮಾಡಿದರು.
ಯಾರಿಗೆ ಟಿಕೆಟ್ ಸಿಗುತ್ತೆ, ಸಿಗಲ್ಲ ಎಂಬುದು ನನಗೆ ಗೊತ್ತಿಲ್ಲ. ಈಗ ಹಾಲಿ ಸಂಸದರಿಗೆ ಟಿಕೆಟ್ ಮಿಸ್ ಆಗಲಿದೆ ಎಂಬ ಸುದ್ದಿ ಮಾಧ್ಯಮಗಳಲ್ಲಿ ಬರುತ್ತಿದೆ. ಹಾಲಿ ಸಂಸದರಿಗೆ ಟಿಕೆಟ್ ಮಿಸ್ ಆಗಲಿದೆ ಎಂದು ಪ್ರಧಾನಿ ಮೋದಿ, ಜೆ.ಪಿ ನಡ್ಡಾ ಹಾಗೂ ಅಮಿತ್ ಶಾ ಎಲ್ಲಿಯೂ ಹೇಳಿಲ್ಲ. ಈ ಸುದ್ದಿಗಳು ಊಹಾಪೋಹ ಎನಿಸುತ್ತದೆ. ಇನ್ನೂ ಮೂರ್ನಾಲ್ಕು ದಿನಗಳಲ್ಲಿ ಪಟ್ಟಿ ಬಿಡುಗಡೆ ಆಗಲಿದ್ದು, ಆಗ ಸತ್ಯ ಹೊರಬರುತ್ತದೆ ಎಂದು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಹೇಳಿದ್ದಾರೆ.
ಬೆಳಗಾವಿ
ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಂಸದೆ, ಸಂಸದರಿಗೆ ಟಿಕೆಟ್ ಮಿಸ್ ಆಗುತ್ತದೆ ಎಂಬುದು ನಮಗ್ಯಾರಿಗೂ ಗೊತ್ತಿಲ್ಲ. ಗೆಲ್ಲುವ ಪಕ್ಷಕ್ಕೆ ಬಹಳಷ್ಟು ಜನರು ಟಿಕೆಟ್ ಕೇಳುವುದು ಸಹಜ. ಟಿಕೆಟ್ ಕೇಳುವುದು ತಪ್ಪಲ್ಲ. ಹಲವು ವರ್ಷಗಳಿಂದ ಪಕ್ಷಕ್ಕಾಗಿ ದುಡಿದ ನಮ್ಮ ಕಾರ್ಯಕರ್ತರಿಗೆ ಟಿಕೆಟ್ ಕೇಳುವ ಹಕ್ಕಿದೆ. ನಮ್ಮ ಕೇಂದ್ರ ಚುನಾವಣಾ ಮಂಡಳಿಯಿದೆ. ಯಾರಿಗೆ ಎಲ್ಲಿಂದ ಟಿಕೆಟ್ ಕೊಡಬೇಕು? ಏಕೆ ಕೊಡಬೇಕು? ಅದರಿಂದಾಗುವ ಲಾಭಗಳ ಆಧಾರದ ಮೇಲೆ ಖಂಡಿತವಾಗಿ ನಮ್ಮ ನಾಯಕರು ನಿರ್ಧಾರ ತೆಗೆದುಕೊಳ್ಳುತ್ತಾರೆ ಎಂದು ಹೇಳಿಕೆ ನೀಡಿದ್ದಾರೆ.









