ಬೆಂಗಳೂರು: ಮೈಸೂರು ಅಭಿವೃದ್ಧಿ ಪ್ರಾಧಿಕಾರ (ಮುಡಾ) ಹಗರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಅವರ ಪತ್ನಿಗೆ ನೋಟಿಸ್ ಜಾರಿಗೊಳಿಸುವಂತೆ ಹೈಕೋರ್ಟ್ (High Court) ಆದೇಶ ನೀಡಿದೆ. ಮುಡಾದಿಂದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪತ್ನಿಗೆ 14 ನಿವೇಶನ ಹಂಚಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿಐ ತನಿಖೆ ಕೋರಿ ಸಾಮಾಜಿಕ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಸಲ್ಲಿಸಿದ ಮೇಲ್ಮನವಿ ಅರ್ಜಿ ವಿಚಾರಣೆ ಹೈಕೋರ್ಟ್ ವಿಭಾಗೀಯ ಪೀಠದಲ್ಲಿ ಗುರುವಾರ (ಜು.10) ನಡೆಯಿತು.
.ಆ ನಂತರ ಇಡಿ ಕೂಡ ಪ್ರಕರಣ ದಾಖಲಿಸಿಕೊಂಡಿತ್ತು. ಬಳಿಕ ಪ್ರಕರಣ ದೊಡ್ಡ ವಿವಾದ ಸ್ವರೂಪ ಪಡೆದುಕೊಳ್ಳುತ್ತಿದ್ದಂತೆಯೇ ಸಿಎಂ ಪತ್ನಿ ಪಾರ್ವತಿ ಸೈಟ್ಗಳನ್ನು ಮುಡಾಕ್ಕೆ ವಾಪಸ್ ನೀಡಿದ್ದರು. ಉಳಿದಂತೆ, ಮುಡಾ ಹಗರಣದಲ್ಲಿನ ಹಣಕಾಸು ಅಕ್ರಮಗಳ ಬಗ್ಗೆ ತನಿಖೆ ನಡೆಸುತ್ತಿರುವ ಜಾರಿ ನಿರ್ದೇಶನಾಲಯ, ಅಕ್ರಮವಾಗಿ ಹಂಚಿಕೆಯಾದ ಸೈಟ್ಗಳನ್ನು ಮುಟ್ಟುಗೋಲು ಹಾಕಿಕೊಂಡಿದೆ. ಸದ್ಯ ಇಡಿ ತನಿಖೆ ಪ್ರಗತಿಯಲ್ಲಿದೆ.
ಏಕಸದಸ್ಯ ಪೀಠದಿಂದ ತಾತ್ಕಾಲಿಕ ರಿಲೀಫ್
ಪ್ರಕರಣದ ತನಿಖೆಯನ್ನು ಸಿಬಿಐಗೆ ನೀಡುವಂತೆ ದೂರುದಾರ ಸ್ನೇಹಮಯಿ ಕೃಷ್ಣ ಸಲ್ಲಿಸಿದ್ದ
ಅರ್ಜಿಯನ್ನು ಹೈಕೋರ್ಟ್ ಏಕಸದಸ್ಯ ಪೀಠ ವಜಾ ಗೊಳಿಸಿತ್ತು. ಲೋಕಾಯುಕ್ತ ಪೊಲೀಸರ ತನಿಖೆ ಅಸಮರ್ಪಕ ಎನ್ನುವುದಕ್ಕೆ ಕಾರಣಗಳಿಲ್ಲ, ಲೋಕಾಯುಕ್ತ ತನಿಖೆ ತಾರತಮ್ಯಪೂರಿತ ಎಂಬುದಕ್ಕೆ ಆಧಾರಗಳಿಲ್ಲ. ಲೋಕಾಯುಕ್ತ ಸ್ವತಂತ್ರ ತನಿಖಾ ಸಂಸ್ಥೆಯಾಗಿದೆ ಎಂದು ನ್ಯಾ.ಎಂ.ನಾಗಪ್ರಸನ್ನ ಅವರಿದ್ದ ಹೈಕೋರ್ಟ್ ಪೀಠ ಪ್ರಕರಣವನ್ನು ಸಿಬಿಐಗೆ ನೀಡಲು ನಿರಾಕರಿಸಿ ಆದೇಶ ಹೊರಡಿಸಿತ್ತು. ನಂತರ ಸ್ನೇಹಮಯಿ ಕೃಷ್ಣ ಅವರು ವಿಭಾಗೀಯ ಪೀಠಕ್ಕೆ ಅರ್ಜಿ ಸಲ್ಲಿಸಿದ್ದಾರೆ. ವಿಭಾಗೀಯ ಪೀಠ ಇಂದು ಕೃಷ್ಣ ಅವರ ಅರ್ಜಿಯ ವಿಚಾರಣೆಯನ್ನು ಮುಂದುವರಿಸಿ ಈ ಮೇಲಿನಂತೆ ಆದೇಶ ನೀಡಿದೆ.













