ಬೆಂಗಳೂರು: ರಾಜ್ಯ ರಾಜಕೀಯದ ನಿರೀಕ್ಷಿತ ಬೆಳವಣಿಗೆಯಲ್ಲಿ ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರ ಪುತ್ರ ಹಾಗೂ ಶಿಕಾರಿಪುರ ವಿಧಾನಸಭಾ ಕ್ಷೇತ್ರದ ಶಾಸಕ ಬಿವೈ ವಿಜಯೇಂದ್ರ ಅವರಿಗೆ ದೀಪಾವಳಿ ಗಿಫ್ಟ್ ಸಿಕ್ಕಿದೆ. ಶುಕ್ರವಾರ ಬಿಜೆಪಿ ರಾಷ್ಟ್ರಾಧ್ಯಕ್ಷ ಜೆಪಿ ನಡ್ಡಾ ವಿಜಯೇಂದ್ರ ಅವರನ್ನು ಬಿಜೆಪಿ ರಾಜ್ಯಾಧ್ಯಕ್ಷರನ್ನಾಗಿ ನೇಮಿಸಿ ಆದೇಶ ಹೊರಡಿಸಿದ್ದಾರೆ. ಇದಕ್ಕೂ ಮುನ್ನ ಅವರು ಬಿಜೆಪಿಯ ಉಪಾಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದರು. ಕಳೆದ ವಿಧಾನಸಭೆ ಚುನಾವಣೆಯಲ್ಲಿ ಸೋಲು ಕಂಡ ಬಳಿಕ ನಳೀನ್ ಕುಮಾರ್ ಕಟೀಲ್ ರಾಜ್ಯಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. ಆ ಬಳಿಕ ಬಿಜೆಪಿ ರಾಜ್ಯಾಧ್ಯಕ್ಷ ಯಾರಾಗಲಿದ್ದಾರೆ ಎನ್ನುವ ಬಗ್ಗೆ ಭಾರೀ ಕುತೂಹಲಗಳಿದ್ದವು. ಲಿಂಗಾಯತ ಸಮುದಾಯ ಪಕ್ಷಕ್ಕೆ ನೀಡಿದ ಬೆಂಬಲವನ್ನು ಮುಂದುವರಿಸಿಕೊಂಡು ಹೋಗುವ ಸಲುವಾಗಿ, ಯುವ ಮೋರ್ಚಾದಲ್ಲಿಯೂ ದೊಡ್ಡ ಮಟ್ಟದಲ್ಲಿ ಕೆಲಸ ಮಾಡಿದ್ದ ವಿಜಯೇಂದ್ರ ಅವರಿಗೆ ಈ ಜವಾಬ್ದಾರಿ ನೀಡಲಾಗಿದೆ.
ಕರ್ನಾಟಕದಲ್ಲಿ ಮುಂದಿನ ಲೋಕಸಭಾ ಚುನಾವಣೆಯ ವೇಳೆ ಆಡಳಿತಾರೂಢ ಕಾಂಗ್ರೆಸ್ ಪಕ್ಷಕ್ಕೆ ಶಾಕ್ ನೀಡಬೇಕಾದಲ್ಲಿ ದೊಡ್ಡ ಸಮುದಾಯದ ನಾಯಕರೊಬ್ಬರ ನೇತೃತ್ವದ ಬಿಜೆಪಿಗೆ ಅನಿವಾರ್ಯವಾಗಿತ್ತು. ಚುನಾವಣೆ ಬಳಿಕ ಬಿಜೆಪಿ ಬಹುತೇಕ ಶೂನ್ಯ ನಾಯಕತ್ವದಲ್ಲಿತ್ತು. ಸಾಕಷ್ಟು ಚರ್ಚೆಗಳ ಬಳಿಕ ಅಳೆದು ತೂಗಿ ರಾಷ್ಟ್ರೀಯ ಬಿಜೆಪಿ ಯುವ ನಾಯಕ ಬಿವೈ ವಿಜಯೇಂದ್ರ ಅವರಿಗೆ ರಾಜ್ಯದ
ಬಿಜೆಪಿಯ ನಾಯಕತ್ವದ ಹೊರೆ ನೀಡಿದೆ. 2020 ರಿಂದ ಕರ್ನಾಟಕದ ಭಾರತೀಯ ಜನತಾ ಪಕ್ಷದ ರಾಜ್ಯ ಉಪಾಧ್ಯಕ್ಷರಾಗಿದ್ದಾರೆ. ಇದಕ್ಕೂ ಮುನ್ನ ಭಾರತೀಯ ಜನತಾ ಯುವ ಮೋರ್ಚಾದ ಕರ್ನಾಟಕ ಘಟಕದ ಪ್ರಧಾನ ಕಾರ್ಯದರ್ಶಿಯಾಗಿ ಸೇವೆ ಸಲ್ಲಿಸಿದ್ದರು. ವೃತ್ತಿಯಿಂದ ವಕೀಲರಾಗಿರುವ ಬಿವೈ ವಿಜಯೇಂದ್ರ, ಅವರ ಸಹೋದರ ಬಿ.ವೈ.ರಾಘವೇಂದ್ರ ಶಿವಮೊಗ್ಗ ಲೋಕಸಭಾ ಕ್ಷೇತ್ರದ ಸಂಸದರಾಗಿದ್ದಾರೆ.













