ಭಾರಿ ಮಳೆ ಸಾಧ್ಯತೆ: ದಕ್ಷಿಣ ಕನ್ನಡ, ಧಾರವಾಡದ ಎಲ್ಲಾ ಶಾಲೆಗಳು, ಉತ್ತರ ಕನ್ನಡದ ಕರಾವಳಿ ತಾಲೂಕುಗಳಲ್ಲಿ ಇಂದು ರಜೆ

Coastal Bulletin
ಭಾರಿ ಮಳೆ ಸಾಧ್ಯತೆ: ದಕ್ಷಿಣ ಕನ್ನಡ, ಧಾರವಾಡದ ಎಲ್ಲಾ ಶಾಲೆಗಳು, ಉತ್ತರ ಕನ್ನಡದ ಕರಾವಳಿ ತಾಲೂಕುಗಳಲ್ಲಿ ಇಂದು ರಜೆ

ದಕ್ಷಿಣ ಕನ್ನಡ/ಉತ್ತರ ಕನ್ನಡ: ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಭಾರಿ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಇಂದು (ಗುರುವಾರ) ಅಂಗನವಾಡಿ, ಶಾಲೆ ಹಾಗೂ ಪ್ರೌಢಶಾಲೆಗಳಿಗೆ ರಜೆ ನೀಡಲಾಗಿದೆ. ಭಾರತೀಯ ಹವಾಮಾನ ಇಲಾಖೆಯ ಮುನ್ಸೂಚನೆಯಂತೆ, ಇದೇ ಹವಾಮಾನ ಪರಿಸ್ಥಿತಿಯ ಮುಂದುವರೆಯುವ ಸೂಚನೆಯಿದ್ದು, ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಆರೆಂಜ್ ಅಲರ್ಟ್ ಘೋಷಣೆಯಾಗಿದೆ. ಮುಂಜಾಗ್ರತಾ ಕ್ರಮವಾಗಿ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರವು ಈ ಕೆಳಗಿನಂತೆ ತುರ್ತು ಕ್ರಮಗಳನ್ನು ಕೈಗೊಂಡಿದೆ ಎಂದು ಜಿಲ್ಲಾಧಿಕಾರಿ ತಿಳಿಸಿದ್ದಾರೆ.

ತುರ್ತು ಕ್ರಮಗಳು:

ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ ಅಂಗನವಾಡಿ ಕೇಂದ್ರಗಳಿಗೆ, ಪ್ರಾಥಮಿಕ & ಪ್ರೌಢ ಶಾಲೆ, ಸರ್ಕಾರಿ ಅನುದಾನಿತ ಮತ್ತು ಖಾಸಗಿ ವಿದ್ಯಾಸಂಸ್ಥೆಗಳಿಗೆ 12.06.2025ರಂದು ರಜೆ ಘೋಷಣೆ.

ನೀರು ಇರುವ ತಗ್ಗು ಪ್ರದೇಶ, ಕೆರೆ, ನದಿ ತೀರ ಸಮುದ್ರ ತೀರಕ್ಕೆ ಮಕ್ಕಳು ಹೋಗದಂತೆ ಪಾಲಕರು ಜಾಗ್ರತೆ ವಹಿಸಿ.

ಮೀನುಗಾರರು ಸಮುದ್ರಕ್ಕೆ ಇಳಿಯಬಾರದು.

ಜಿಲ್ಲಾ ಮತ್ತು ತಾಲೂಕು ಮಟ್ಟದ ಅಧಿಕಾರಿಗಳು, ಕಡ್ಡಾಯವಾಗಿ ಕೇಂದ್ರ ಸ್ಥಾನದಲ್ಲಿದ್ದುಕೊಂಡು ವಿಪತ್ತು ನಿರ್ವಹಣೆಯನ್ನು ಚಾಚೂ ತಪ್ಪದೇ ಕಡ್ಡಾಯವಾಗಿ ನಿರ್ವಹಿಸಬೇಕು.

ಜಿಲ್ಲಾಡಳಿತದಿಂದ ವಿವಿಧ ಪ್ರದೇಶಗಳಿಗೆ ನೇಮಿಸಲಾಗಿರುವ ನೋಡಲ್ ಅಧಿಕಾರಿಗಳು ಸದಾ ಜಾಗೃತರಾಗಿದ್ದು, ಸಾರ್ವಜನಿಕ ದೂರುಗಳಿಗೆ ತಕ್ಷಣ ಸ್ಪಂದಿಸುವುದು ಮತ್ತು ಜಿಲ್ಲಾಧಿಕಾರಿ ಕಛೇರಿಯ ನಿಯಂತ್ರಣ ಕೊಠಡಿಯೊಂದಿಗೆ ನಿರಂತರ ಸಂಪರ್ಕದಲ್ಲಿರಬೇಕು.

ಪ್ರವಾಸಿಗರು/ಸಾರ್ವಜನಿಕರು ನದಿ ತೀರ, ಸಮುದ್ರ ತೀರಕ್ಕೆ ತೆರಳದಂತೆ ಸೂಚನೆ.

ಸಂಬಂಧಪಟ್ಟ ಇಲಾಖಾ ಅಧಿಕಾರಿಗಳು ಪ್ರತೀ ತಾಲೂಕುಗಳಲ್ಲಿ ಕಾಳಜಿ ಕೇಂದ್ರ ತೆರೆದು ಸನ್ನದ್ಧ ಸ್ಥಿತಿಯಲ್ಲಿರಬೇಕು.

ಪ್ರಾಕೃತಿಕ ವಿಕೋಪ ಸಂಬಂಧಿಸಿದ ಯಾವುದೇ ಸಮಸ್ಯೆಗಳಿಗೆ 1077 ಅಥವಾ 0824 2442590 ದೂರವಾಣಿ ಸಂಖ್ಯೆಗೆ ಕರೆ ಮಾಡುವಂತೆ ಜಿಲ್ಲಾಧಿಕಾರಿ ತಿಳಿಸಿದ್ದಾರೆ.

ಧಾರವಾಡದ ಅಂಗನವಾಡಿ, ಶಾಲಾ-ಕಾಲೇಜುಗಳಿಗೆ ರಜೆ: ಧಾರವಾಡ ಜಿಲ್ಲೆಗೂ ರೆಡ್ ಅಲರ್ಟ್ ಇರುವುದರಿಂದ ಹಾಗೂ ಜಿಲ್ಲೆಯ ಬಹುತೇಕ ಕಡೆ ನಿನ್ನೆ ಸಂಜೆಯಿಂದಲೂ ನಿರಂತರ ಮತ್ತು ವ್ಯಾಪಕ ಮಳೆ ಆಗುತ್ತಿರುವುದರಿಂದ ಸುರಕ್ಷತೆ ದೃಷ್ಟಿಯಿಂದ ಎಲ್ಲ ಅಂಗನವಾಡಿ, ಪ್ರಾಥಮಿಕ ಶಾಲೆ, ಪ್ರೌಢಶಾಲೆ, ಪಿಯು ಮತ್ತು ಪದವಿ ಕಾಲೇಜುಗಳಿಗೆ ಇಂದು (ಜೂ.12) ಒಂದು ದಿನದ ರಜೆ ಘೋಷಿಸಿ, ಜಿಲ್ಲಾಧಿಕಾರಿ ದಿವ್ಯ ಪ್ರಭು ಆದೇಶಿಸಿದ್ದಾರೆ.

ಪ್ರಕಟಣೆ ನೀಡಿರುವ ಅವರು, ನಿರಂತರ ಮಳೆ ಆಗುತ್ತಿರುವುದರಿಂದ ಅನೇಕ ಹಳ್ಳಕೊಳ್ಳಗಳು ತುಂಬಿ ಹರಿಯುತ್ತಿವೆ. ಸಾರ್ವಜನಿಕರು ಸುರಕ್ಷತಾ ಕ್ರಮಗಳನ್ನು ಅನುಸರಿಸಬೇಕು ಎಂದು ಅವರು ತಿಳಿಸಿದ್ದಾರೆ.

ಧಾರವಾಡ ಜಿಲ್ಲೆಯ ಬೆಣ್ಣಿಹಳ್ಳ ಮತ್ತು ತುಪ್ಪರಿ ಹಳ್ಳದ ಅಚ್ಚುಕಟ್ಟು ಪ್ರದೇಶದಲ್ಲಿ ಬುಧವಾರ ರಾತ್ರಿ ವ್ಯಾಪಕ ಮಳೆಯಾಗಿದ್ದರಿಂದ, ಎರಡೂ ಹಳ್ಳದ ಹರಿವಿನಲ್ಲಿ ನೀರಿನ ಪ್ರಮಾಣ ಹೆಚ್ಚಾಗುವ ಸಾಧ್ಯತೆ ಇದೆ. ಇದರಿಂದ ಪ್ರವಾಹ ಪರಿಸ್ಥಿತಿ ಉಂಟಾಗಬಹುದು ಎಂದು ಎಚ್ಚರಿಕೆ ನೀಡಿದ್ದಾರೆ.

ರಾಜ್ಯ ಹವಾಮಾನ ಇಲಾಖೆ ವರದಿಯಂತೆ, ಮುಂದಿನ 3 ದಿನ ಮಳೆ ಪ್ರಮಾಣ ಹೆಚ್ಚಾಗುವ ಸಾಧ್ಯತೆ ಹಿನ್ನೆಲೆಯಲ್ಲಿ ಧಾರವಾಡ ಜಿಲ್ಲೆ, ಬೆಣ್ಣಿಹಳ್ಳ ಮತ್ತು ತುಪ್ಪರಿ ಹಳ್ಳದ ಅಚ್ಚುಕಟ್ಟು ಪ್ರದೇಶದಲ್ಲಿ ಎಚ್ಚರಿಕೆ ವಹಿಸಲು ಅಧಿಕಾರಿಗಳಿಗೆ, ಸಾರ್ವಜನಿಕರಿಗೆ ಸೂಚಿಸಿದ್ದಾರೆ.

ಪಿಯುಸಿ ವಾರ್ಷಿಕ ಪರೀಕ್ಷೆ-3 ಜರುಗುತ್ತದೆ: ಶಾಲಾ ಶಿಕ್ಷಣ ಮತ್ತು ಮೌಲ್ಯ ನಿರ್ಣಯ ಮಂಡಳಿ (ಪಿಯುಸಿ ಬೊರ್ಡ್) ವೇಳಾಪಟ್ಟಿಯಂತೆ ಈಗಾಗಲೇ ಇಂದು ನಿಗದಿಯಾಗಿರುವ ಪಿಯುಸಿ ವಾರ್ಷಿಕ ಪರೀಕ್ಷೆ-3 ಅನ್ನು ಇಂದು ನಡೆಸಲಾಗುತ್ತದೆ. ಈ ಪರೀಕ್ಷೆಯು ಯಥಾ ಪ್ರಕಾರ ಹುಬ್ಬಳ್ಳಿಯ ಮೂರು, ಧಾರವಾಡದ ಮೂರು ಹಾಗೂ ಕುಂದಗೋಳ, ಕಲಘಟಗಿ ಮತ್ತು ಅಣ್ಣಿಗೇರಿ ಪಟ್ಟಣದ ತಲಾ ಒಂದು ಕೇಂದ್ರ ಸೇರಿ ಒಟ್ಟು 9 ಕೇಂದ್ರಗಳಲ್ಲಿ ನಡೆಯಲಿದೆ. ಸಂಬಂಧಿಸಿದ ವಿದ್ಯಾರ್ಥಿಗಳು, ಶಿಕ್ಷಕರು, ಸಿಬ್ಬಂದಿ ನಿಯಮಾನುಸಾರ ಕರ್ತವ್ಯ ನಿರ್ವಹಿಸಲು ಜಿಲ್ಲಾಧಿಕಾರಿ ತಿಳಿಸಿದ್ದಾರೆ.

ಎಲ್ಲಾ ಇಲಾಖೆ ಅಧಿಕಾರಿಗಳು ಕೇಂದ್ರಸ್ಥಾನದಲ್ಲಿ ಇದ್ದು, ಮಳೆ, ಪ್ರವಾಹದಿಂದ ಸಾರ್ವಜನಿಕರಿಗೆ ತೊಂದರೆ ಆಗದಂತೆ ಮುನ್ನೆಚ್ಚರಿಕೆ ವಹಿಸಬೇಕು. ಮತ್ತು ಈ ಕುರಿತು ಸಾರ್ವಜನಿಕರಿಗೆ ವ್ಯಾಪಕ ಪ್ರಚಾರ ನೀಡಬೇಕೆಂದು ಜಿಲ್ಲಾಧಿಕಾರಿ ದಿವ್ಯ ಪ್ರಭು ಪ್ರಕಟಣೆಯಲ್ಲಿ ಮಾಹಿತಿ ನೀಡಿದ್ದಾರೆ.

ಉತ್ತರ ಕನ್ನಡದ ಕರಾವಳಿ ತಾಲೂಕುಗಳಲ್ಲೂ ರಜೆ ಘೋಷಣೆ: ಹಾಗೆಯೇ, ಉತ್ತರ ಕನ್ನಡ ಜಿಲ್ಲೆಗೂ ರೆಡ್ ಅಲರ್ಟ್ ನೀಡಲಾಗಿದ್ದು, ಜಿಲ್ಲೆಯ ಕರಾವಳಿ ಭಾಗದ ತಾಲೂಕುಗಳಾದ ಕುಮಟಾ, ಕಾರವಾರ, ಅಂಕೋಲಾ, ಹೊನ್ನಾವರ ಹಾಗೂ ಭಟ್ಕಳದ ಅಂಗನವಾಡಿ, ಶಾಲೆ, ಪ್ರೌಢಶಾಲೆಗಳಿಗೆ ಇಂದು (ಜೂನ್ 12) ರಜೆ ಘೋಷಿಸಲಾಗಿದೆ. ಜನರು ಹಾಗೂ ಅಧಿಕಾರಿಗಳು ಮುಂಜಾಗ್ರತಾ ಕ್ರಮ ವಹಿಸುವಂತೆ ಜಿಲ್ಲಾಧಿಕಾರಿ ಲಕ್ಷ್ಮೀಪ್ರಿಯಾ ಸೂಚನೆ ನೀಡಿದ್ದಾರೆ.

Leave a Comment