ದೆವ್ವ ಬಿಡಿಸುವ ನೆಪದಲ್ಲಿ ಮಹಿಳೆ ಮೇಲೆ ಅತ್ಯಾಚಾರ ಆರೋಪ: ಅರ್ಚಕ ಅರೆಸ್ಟ್

Coastal Bulletin
ದೆವ್ವ ಬಿಡಿಸುವ ನೆಪದಲ್ಲಿ ಮಹಿಳೆ ಮೇಲೆ ಅತ್ಯಾಚಾರ ಆರೋಪ: ಅರ್ಚಕ ಅರೆಸ್ಟ್

ಚಿಕ್ಕಮಗಳೂರು: ದೆವ್ವ ಬಿಡಿಸುವ ನೆಪದಲ್ಲಿ ಮಹಿಳೆಯ ಮೇಲೆ ನಿರಂತರ ಅತ್ಯಾಚಾರ ಎಸಗಿದ ಆರೋಪ ಎದುರಿಸುತ್ತಿದ್ದ, ಕಳೆದ ಒಂದೂವರೆ ತಿಂಗಳಿನಿಂದ ತಲೆಮರೆಸಿಕೊಂಡಿದ್ದ ಸತೀಶ್ ಪಾತ್ರಿ ಅವರನ್ನು ಬಂಧಿಸಿರುವುದಾಗಿ ಪೊಲೀಸರು ತಿಳಿಸಿದ್ದಾರೆ.

ಬೆಂಗಳೂರಿನ ಜೆ.ಪಿ. ನಗರದಲ್ಲಿ ಆರೋಪಿಯನ್ನು ಬಂಧಿಸುವಲ್ಲಿ ಚಿಕ್ಕಮಗಳೂರು ಜಿಲ್ಲಾ ಪೊಲೀಸರ ತಂಡ ಯಶಸ್ವಿಯಾಗಿದೆ. ಈ ಪ್ರಕರಣ ಮಲೆನಾಡು ಭಾಗದಲ್ಲಿ ತೀವ್ರ ಚರ್ಚೆಗೆ ಗ್ರಾಸವಾಗಿದ್ದು, ಧಾರ್ಮಿಕ ನಂಬಿಕೆಯ ಹೆಸರಿನಲ್ಲಿ ನಡೆಯುವ ಇಂತಹ ಕೃತ್ಯಗಳ ವಿರುದ್ಧ ಸಾರ್ವಜನಿಕ ವಲಯದಲ್ಲಿ ಆಕ್ರೋಶ ವ್ಯಕ್ತವಾಗುತ್ತಿದೆ.

ಚಿಕ್ಕಮಗಳೂರು ಜಿಲ್ಲೆಯ ಕೊಪ್ಪ ತಾಲೂಕಿನ ಮೇಕನಹಡ್ಲು ಗ್ರಾಮದಲ್ಲಿ ದೇವಸ್ಥಾನದ ಅರ್ಚಕನಾಗಿದ್ದ ಸತೀಶ್ ಪಾತ್ರಿ, ಮಹಿಳೆಯೊಬ್ಬರಿಗೆ ಭೂತ-ದೆವ್ವ ಬಿಡಿಸುವುದಾಗಿ ನಂಬಿಸಿ ನಿರಂತರವಾಗಿ ಅತ್ಯಾಚಾರ ಎಸಗಿದ್ದಾನೆ ಎಂಬ ಗಂಭೀರ ಆರೋಪ ಕೇಳಿ ಬಂದಿದೆ. ಆಧ್ಯಾತ್ಮಿಕ ಆಚರಣೆಗಳು ಹಾಗೂ ದೆವ್ವ ಬಿಡಿಸುವ ನೆಪದಲ್ಲಿ ಮಹಿಳೆಯನ್ನು ನಂಬಿಸಿ, ಆಕೆಯ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿದ್ದಾನೆ ಎಂದು ದೂರಿನಲ್ಲಿ ಆರೋಪಿಸಲಾಗಿದೆ.

ಹಾಗೆಯೇ, ಭೂತ ಬಿಡಿಸುವ ನೆಪದಲ್ಲಿ ಅಪ್ರಾಪ್ತ ಬಾಲಕಿಯೊಬ್ಬಳಿಗೆ ಕೋಳಿ ರಕ್ತ ಕುಡಿಯುವಂತೆ ಬಲವಂತ ಪಡಿಸಿದ್ದಾನೆ ಎಂಬ ಆಘಾತಕಾರಿ ಆರೋಪವೂ ಪ್ರಕರಣದಲ್ಲಿ ಕೇಳಿ ಬಂದಿದೆ. ಈ ಕುರಿತು ಪೊಲೀಸರು ತನಿಖೆ ಚುರುಕುಗೊಳಿಸಿದ್ದಾರೆ.

ದೂರು ದಾಖಲಾಗುತ್ತಿದ್ದಂತೆ ಆರೋಪಿ ನಾಪತ್ತೆ: ಸಂತ್ರಸ್ತ ಮಹಿಳೆ ಕೊಪ್ಪ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ ಬೆನ್ನಲ್ಲೇ ಆರೋಪಿ ಸತೀಶ್ ಪಾತ್ರಿ ನಾಪತ್ತೆಯಾಗಿದ್ದರು. ಪೊಲೀಸರು ಆತನ ಪತ್ತೆಗಾಗಿ ವಿವಿಧೆಡೆ ಶೋಧ ನಡೆಸುತ್ತಿದ್ದರೂ,

ಕಳೆದ ಒಂದೂವರೆ ತಿಂಗಳಿನಿಂದ ಪೊಲೀಸರಿಗೆ ಸಿಗದೆ ತಲೆಮರೆಸಿ ಕೊಂಡಿದ್ದ. ಈತನ ವಿರುದ್ಧ ಕೊಪ್ಪ ಹಾಗೂ ನರಸಿಂಹರಾಜಪುರ ಪೊಲೀಸ್ ಠಾಣೆಗಳಲ್ಲಿ ಅತ್ಯಾಚಾರ ಮತ್ತು ಮಾಟಮಂತ್ರ ನಿಷೇಧ ಕಾಯ್ದೆಗೆ ಸಂಬಂಧಿಸಿದಂತೆ ಗಂಭೀರ ಪ್ರಕರಣಗಳು ದಾಖಲಾಗಿದ್ದವು ಎಂದು ತಿಳಿದುಬಂದಿದೆ.

ಜೆಪಿ ನಗರದಲ್ಲಿ ಪೊಲೀಸರ ಕಾರ್ಯಾಚರಣೆ ಯಶಸ್ವಿ: ಆರೋಪಿಯ ಚಲನವಲನಗಳ ಕುರಿತು ಖಚಿತ ಮಾಹಿತಿ ಸಂಗ್ರಹಿಸಿದ ಪೊಲೀಸರು, ಬೆಂಗಳೂರಿನ ಜೆ.ಪಿ. ನಗರದಲ್ಲಿ ಕ್ಷಿಪ್ರ ಕಾರ್ಯಾಚರಣೆ ನಡೆಸಿ ಸತೀಶ್ ಪಾತ್ರಿಯನ್ನು ಬಂಧಿಸಿದ್ದಾರೆ. ಈ ಮೂಲಕ ಪೊಲೀಸರಿಗೆ ಸವಾಲಾಗಿದ್ದ ಪ್ರಕರಣದಲ್ಲಿ ಮಹತ್ವದ ಬೆಳವಣಿಗೆಯಾಗಿದೆ.

ಬಂಧಿತ ಆರೋಪಿಯನ್ನು ಮುಂದಿನ ಕಾನೂನು ಪ್ರಕ್ರಿಯೆಗಾಗಿ ಪೊಲೀಸರು ವಶಕ್ಕೆ ಪಡೆದಿದ್ದು, ಪ್ರಕರಣಕ್ಕೆ ಸಂಬಂಧಿಸಿದಂತೆ ಹೆಚ್ಚಿನ ವಿಚಾರಣೆ ನಡೆಸುವ ಸಾಧ್ಯತೆಯಿದೆ.

ಧಾರ್ಮಿಕ ನಂಬಿಕೆ ಮತ್ತು ದೆವ್ವ ಬಿಡಿಸುವ ನೆಪದಲ್ಲಿ ಮಹಿಳೆಯರು ಹಾಗೂ ಮಕ್ಕಳನ್ನು ಗುರಿಯಾಗಿಸಿಕೊಂಡು ಇಂತಹ ಕೃತ್ಯಗಳು ನಡೆದಿದ್ದರೆ, ಅವುಗಳ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕು ಎಂಬ ಒತ್ತಾಯ ಸಾರ್ವಜನಿಕ ವಲಯದಲ್ಲಿ ಕೇಳಿ ಬರುತ್ತಿದೆ.

ಈ ಪ್ರಕರಣದಲ್ಲಿ ತನಿಖೆಯ ಗೌಪ್ಯ ಮಾಹಿತಿಯನ್ನು ಸೋರಿಕೆ ಮಾಡಿದ ಆರೋಪದ ಮೇಲೆ ನರಸಿಂಹರಾಜಪುರ ಪೊಲೀಸ್ ಠಾಣೆಯ ಕಾನ್‌ಸ್ಟೇಬಲ್ವೊಬ್ಬರನ್ನು ಚಿಕ್ಕಮಗಳೂರು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಜಿತೇಂದ್ರ ಕುಮಾರ್ ಅವರು ಸೇವೆಯಿಂದ ಅಮಾನತುಗೊಳಿಸಿದ್ದಾರೆ.

Leave a Comment