ಚೆನ್ನೈ: ಚಾಮರಾಜನಗರ ಕಾವೇರಿ ವನ್ಯಜೀವಿ ಧಾಮದಲ್ಲಿ ಅರಣ್ಯ ಇಲಾಖೆ ಸಿಬ್ಬಂದಿ ನಡೆಸಿದ ಗುಂಡಿನ ಚಕಮಕಿಯಲ್ಲಿ ತಮಿಳು ಮೂಲದ ಮೂವರು ಮೃತಪಟ್ಟ ಘಟನೆಯನ್ನು ತಮಿಳುನಾಡು ಮುಖ್ಯಮಂತ್ರಿ ಸಿ. ಜೋಸೆಫ್ ವಿಜಯ್ ತೀವ್ರವಾಗಿ ಖಂಡಿಸಿದ್ದಾರೆ. ಈ ಘಟನೆಯನ್ನು “ಹತ್ಯಾಕಾಂಡ” (Massacre) ಎಂದು ಕರೆದಿರುವ ಅವರು, ಪ್ರಕರಣದ ಕುರಿತು ಉನ್ನತ ಮಟ್ಟದ ನಿಷ್ಪಕ್ಷಪಾತ ತನಿಖೆಗೆ ಆಗ್ರಹಿಸಿದ್ದಾರೆ.
ಕರ್ನಾಟಕದ ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನ ನಿವಾಸಿಗಳಾದ ಆಂಥೋನಿ ಸಾಮಿ, ಜಾನ್ ರೋಸ್ ಪೀಟರ್ ಹಾಗೂ ಕುಮಾರ್ ಅವರನ್ನು ಆಗಸ್ಟ್ 15ರ ಮುಂಜಾನೆ ಕಾವೇರಿ ವನ್ಯಜೀವಿ ಧಾಮದಲ್ಲಿ ಅರಣ್ಯ ಸಿಬ್ಬಂದಿ ಗುಂಡಿಕ್ಕಿ ಕೊಂದು ಹಾಕಿರುವುದು ತೀವ್ರ ಹೃದಯವಿದ್ರಾವಕ. ಈ ದೌರ್ಜನ್ಯವನ್ನು ನಾನು ಬಲವಾಗಿ ಖಂಡಿಸುತ್ತೇನೆ” ಎಂದು ಹೇಳಿದ್ದಾರೆ.
ಕರ್ನಾಟಕ ಅರಣ್ಯ ಇಲಾಖೆ ನೀಡುತ್ತಿರುವ ವಿವರಣೆಗಳನ್ನು ಒಪ್ಪಿಕೊಳ್ಳಲು ಸಾಧ್ಯವಿಲ್ಲ. ಘಟನೆಯ ನೈಜತೆ ಹೊರಬರಲು ಉನ್ನತ ಮಟ್ಟದ ತನಿಖಾ ಸಮಿತಿ ರಚಿಸಬೇಕು ಹಾಗೂ ತಪ್ಪಿತಸ್ಥರಿಗೆ ಕಠಿಣ ಶಿಕ್ಷೆಯಾಗಬೇಕು” ಎಂದು ಒತ್ತಾಯಿಸಿದ್ದಾರೆ. ಮೃತರ ಕುಟುಂಬಗಳಿಗೆ ಸೂಕ್ತ ಪರಿಹಾರ ಒದಗಿಸಬೇಕು ಮತ್ತು ಇಂತಹ ಘಟನೆಗಳು ಭವಿಷ್ಯದಲ್ಲಿ ಮರುಕಳಿಸದಂತೆ ಕರ್ನಾಟಕ ಸರ್ಕಾರ ಎಚ್ಚರವಹಿಸಬೇಕು ಎಂದು ಅವರು ಆಗ್ರಹಿಸಿದ್ದಾರೆ.
ಮ್ಯಾಜಿಸ್ಟ್ರೇಟ್ ತನಿಖೆಗೆ ಆದೇಶಿಸಿದ ಸಿಎಂ ಡಿ.ಕೆ. ಶಿವಕುಮಾರ್:
ಮತ್ತೊಂದೆಡೆ, ಚಾಮರಾಜನಗರ ಜಿಲ್ಲೆಯ
ಶಾಗ್ಯ ಗ್ರಾಮದ ಬಳಿ ನಡೆದ ಈ ಶೂಟೌಟ್ ಪ್ರಕರಣಕ್ಕೆ ಸಂಬಂಧಿಸಿದಂತೆ ಕರ್ನಾಟಕ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಈಗಾಗಲೇ ಪ್ರತಿಕ್ರಿಯಿಸಿದ್ದು, ಮ್ಯಾಜಿಸ್ಟ್ರೇಟ್ ತನಿಖೆಗೆ ಆದೇಶಿಸಲಾಗಿದೆ ಎಂದು ತಿಳಿಸಿದ್ದಾರೆ.
ಘಟನೆಯ ಬಗ್ಗೆ ಮುಂಜಾನೆ 5 ಗಂಟೆಗೆ ಮಾಹಿತಿ ಸಿಕ್ಕಿದೆ. ಹಲವು ಪ್ರತ್ಯಕ್ಷದರ್ಶಿಗಳನ್ನು ವಿಚಾರಣೆ ನಡೆಸಲಾಗಿದ್ದು, ಬಂದೂಕುಗಳು ಸೇರಿದಂತೆ ಪ್ರಮುಖ ಸಾಕ್ಷ್ಯಗಳನ್ನು ವಶಪಡಿಸಿಕೊಳ್ಳಲಾಗಿದೆ. ತನಿಖೆ ಮುಗಿದ ನಂತರವೇ ಪೂರ್ಣ ಸತ್ಯಾಂಶ ತಿಳಿಯಲಿದೆ” ಎಂದು ಮುಖ್ಯಮಂತ್ರಿಗಳು ಸ್ಪಷ್ಟಪಡಿಸಿದ್ದಾರೆ. ಹನೂರು ತಾಲೂಕಿನ ಮಾರಿಯ ಮಂಗಲ ಬೀಟ್ ಪ್ರದೇಶದಲ್ಲಿ ಶಂಕಿತ ಬೇಟೆಗಾರರು ಅರಣ್ಯ ಸಿಬ್ಬಂದಿಯತ್ತ ಗನ್ ಗುರಿಮಾಡಿದಾಗ, ಆತ್ಮರಕ್ಷಣೆಗಾಗಿ ಸಿಬ್ಬಂದಿ ಗುಂಡು ಹಾರಿಸಿದ್ದಾರೆ ಎನ್ನಲಾಗಿದೆ. ಮೃತಪಟ್ಟವರನ್ನು ತೋಮಿಯರ್ ಪಾಳ್ಯದ ನಿವಾಸಿಗಳು ಎಂದು ಗುರುತಿಸಲಾಗಿದೆ. ಸದ್ಯ ಮೃತದೇಹಗಳನ್ನು ಕೊಳ್ಳೇಗಾಲ ಸರ್ಕಾರಿ ಆಸ್ಪತ್ರೆಯಲ್ಲಿ ಇರಿಸಲಾಗಿದ್ದು, ಸ್ಥಳೀಯವಾಗಿ ಯಾವುದೇ ಅಹಿತಕರ ಘಟನೆ ನಡೆಯದಂತೆ ಬಿಗಿ ಪೊಲೀಸ್ ಬಂದೋಬಸ್ತ್ ಕೈಗೊಳ್ಳಲಾಗಿದೆ.













