ಬೆಂಗಳೂರು : ಕಳೆದ ಒಂದೂವರೆ ವರ್ಷದ ಬಳಿಕ ಇಂದಿನಿಂದ ಶಾಲೆಗೆ ಮಕ್ಕಳು ಆಗಮಿಸುತ್ತಿರುವ ಹಿನ್ನೆಲೆಯಲ್ಲಿ ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳುವಂತೆ ಸಹಕಾರ ಹಾಗೂ ಮೈಸೂರು ಮತ್ತು ಚಾಮರಾಜನಗರ ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ.ಸೋಮಶೇಖರ್ ಅಧಿಕಾರಿ ವರ್ಗಕ್ಕೆ ಸೂಚನೆ ನೀಡಿದ್ದಾರೆ.
ಕೋವಿಡ್ ಪ್ರಮಾಣ ತಗ್ಗಿದರೂ ಮೈಮರೆಯುವಂತಿಲ್ಲ. ಹೀಗಾಗಿ ಶಿಕ್ಷಣ ಇಲಾಖೆ ಅಧಿಕಾರಿಗಳು ಸಾಕಷ್ಟು ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಬೇಕು.ಶಾಲಾ ಕೊಠಡಿಗಳು, ಪೀಠೋಪಕರಣಗಳನ್ನು ಸಂಪೂರ್ಣ ಸ್ಯಾನಿಟೈಸ್ ಮಾಡಿರಬೇಕು. ಕೊಠಡಿಯಲ್ಲಿ ದೈಹಿಕ ಅಂತರ ಕಾಪಾಡುವ ರೀತಿಯಲ್ಲಿ ವ್ಯವಸ್ಥೆ ಮಾಡಬೇಕು.
ಶಿಕ್ಷಣ ಇಲಾಖೆಯ ಗೈಡ್ ಲೈನ್ಸ್ ಪಾಲನೆ ಮಾಡಬೇಕು. ಶಿಕ್ಷಕರು ಮತ್ತು ಸಿಬ್ಬಂದಿ ಕಡ್ಡಾಯವಾಗಿ ಎರಡು ಡೋಸ್ ಲಸಿಕೆ ಪಡೆದಿರಬೇಕು. ಶಾಲೆಗೆ ಆಗಮಿಸುವ ಮಕ್ಕಳಿಂದ ಪೋಷಕರ
ಅನುಮತಿ ಪತ್ರವನ್ನು ಕಡ್ಡಾಯವಾಗಿ ಪಡೆದಿರಬೇಕು ಎಂದು ಶಾಲಾ ಸಿಬ್ಬಂದಿಗೆ ನಿರ್ದೇಶನ ನೀಡಿದ್ದಾರೆ.
ನೆಗಡಿ, ಕೆಮ್ಮು ಲಕ್ಷಣಗಳಿದ್ದರೆ ಮಕ್ಕಳನ್ನು ಶಾಲೆಗೆ ಕಳುಹಿಸುವುದು ಬೇಡ. ಮಕ್ಕಳನ್ನು ಶಾಲೆಗೆ ಕಳುಹಿಸಲು ಭಯ ಬೇಡ, ಆದರೆ ಮುನ್ನೆಚ್ಚರಿಕೆ ವಹಿಸಬೇಕು ಎಂದು ಪೋಷಕರಿಗೆ ಮನವಿ ಮಾಡಿದ್ದಾರೆ.
ಸೋಮವಾರದಿಂದ ಶಾಲೆಗಳು ಆರಂಭವಾಗುತ್ತಿರುವುದರಿಂದ ಜಿಲ್ಲಾಧಿಕಾರಿ, ತಹಸೀಲ್ದಾರ್, ಡಿಡಿಪಿಐ ಹಾಗೂ ಕ್ಷೇತ್ರ ಶಿಕ್ಷಣಾಧಿಕಾರಿಗಳು ಶಾಲೆಗೆ ಭೇಟಿ ನೀಡಿ ಪರಿಶೀಲನೆ ನಡೆಸಬೇಕು ಎಂದಿದ್ದಾರೆ.














