ಯುಗಾದಿ, ರಂಜಾನ್​​ಗೆ KSRTCಯಿಂದ 2000 ಹೆಚ್ಚುವರಿ ಬಸ್: ಮುಂಗಡ ಬುಕ್ಕಿಂಗ್​ನಲ್ಲಿ ರಿಯಾಯಿತಿ

Coastal Bulletin
ಯುಗಾದಿ, ರಂಜಾನ್​​ಗೆ KSRTCಯಿಂದ 2000 ಹೆಚ್ಚುವರಿ ಬಸ್: ಮುಂಗಡ ಬುಕ್ಕಿಂಗ್​ನಲ್ಲಿ ರಿಯಾಯಿತಿ

ಬೆಂಗಳೂರು: ಯುಗಾದಿ ಮತ್ತು ರಂಜಾನ್ ಹಬ್ಬದ ಸಂದರ್ಭದಲ್ಲಿ ಪ್ರಯಾಣಿಕರ ಅನುಕೂಲಕ್ಕಾಗಿ ರಾಜ್ಯ ಸಾರಿಗೆ ಸಂಸ್ಥೆ ಕೆಎಸ್ಆ​​ರ್​ಟಿಸಿ ಎರಡು ಸಾವಿರ ಹೆಚ್ಚುವರಿ ಬಸ್ಸುಗಳನ್ನು ಓಡಿಸುತ್ತಿದೆ.

ಮಾರ್ಚ್ 30ರಂದು ಚಾಂದ್ರಮಾನ ಯುಗಾದಿ ಹಬ್ಬ ಮತ್ತು ಮಾರ್ಚ್ 31ರಂದು ರಂಜಾನ್ ಹಬ್ಬವಿರುವುದರಿಂದ ಮಾರ್ಚ್‌ 28ರಿಂದ 30ರವರೆಗೆ ಬೆಂಗಳೂರಿನಿಂದ ರಾಜ್ಯದ ವಿವಿಧಡೆ ಹೆಚ್ಚುವರಿ ಬಸ್‌ಗಳ ವ್ಯವಸ್ಥೆ ಮಾಡಲಾಗಿದೆ. ಹಾಗೆಯೇ ರಾಜ್ಯ ಮತ್ತು ಅಂತಾರಾಜ್ಯದ ವಿವಿಧ ಸ್ಥಳಗಳಿಂದ ಬೆಂಗಳೂರಿಗೆ ಮಾರ್ಚ್ 31ರಂದು ಹೆಚ್ಚುವರಿಯಾಗಿ ವಿಶೇಷ ಬಸ್ಸುಗಳನ್ನು ಓಡಿಸಲಾಗುತ್ತದೆ.

ಬೆಂಗಳೂರಿನಿಂದ ಎಲ್ಲೆಲ್ಲಿಗೆ ಬಸ್ ಸೇವೆ?

ಕೆಂಪೇಗೌಡ ಬಸ್ ನಿಲ್ದಾಣ ಮೆಜೆಸ್ಟಿಕ್​​ನಿಂದ ಧರ್ಮಸ್ಥಳ, ಕುಕ್ಕೆ ಸುಬ್ರಮಣ್ಯ, ಶಿವಮೊಗ್ಗ, ಹಾಸನ, ಮಂಗಳೂರು, ಕುಂದಾಪುರ, ಶೃಂಗೇರಿ, ಹೊರನಾಡು, ದಾವಣಗೆರೆ, ಹುಬ್ಬಳ್ಳಿ, ಧಾರವಾಡ, ಬೆಳಗಾವಿ, ವಿಜಯಪುರ, ಗೋಕರ್ಣ, ಶಿರಸಿ, ಕಾರವಾರ, ರಾಯಚೂರು, ಕಲಬುರಗಿ, ಬಳ್ಳಾರಿ, ಕೊಪ್ಪಳ, ಯಾದಗಿರಿ, ಬೀದರ್, ತಿರುಪತಿ, ವಿಜಯವಾಡ ಮತ್ತು ಹೈದರಾಬಾದ್.

ಮೈಸೂರು ರಸ್ತೆಯ ಸ್ಯಾಟಲೈಟ್ ಬಸ್ ನಿಲ್ದಾಣದಿಂದ ಮೈಸೂರು, ಹುಣಸೂರು, ಪಿರಿಯಾಪಟ್ಟಣ, ವಿರಾಜಪೇಟೆ, ಕುಶಾಲನಗರ, ಮಡಿಕೇರಿ ಮಾರ್ಗದ ಕಡೆ ಹೆಚ್ಚುವರಿ ಬಸ್​​ಗಳ ಸಂಚಾರ ಇರುತ್ತದೆ. ತಮಿಳುನಾಡು ಮತ್ತು ಕೇರಳ ಕಡೆಗೆ ಅಂದರೆ ಮಧುರೈ, ಕುಂಭಕೋಣಂ, ಚೆನ್ನೈ, ಕೊಯಮತ್ತೂರ್, ತಿರುಚಿ, ಪಾಲಕ್ಕಾಡ್, ತ್ರಿಶೂರ್, ಏರ್ನಾಕುಲಂ, ಕೋಯಿಕೋಡ್, ಕ್ಯಾಲಿಕಟ್ ಮುಂತಾದ ಸ್ಥಳಗಳಿಗೆ ಹೋಗಲು ರಾಜಹಂಸ, ವೋಲ್ವೋ, ಸ್ಲೀಪರ್ ಬಸ್​ಗಳಂತ ಪ್ರತಿಷ್ಠಿತ ಸಾರಿಗೆ ಸೌಲಭ್ಯವು ಶಾಂತಿನಗರದಲ್ಲಿನ ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ ಬಸ್ ನಿಲ್ದಾಣದಲ್ಲಿ ದೊರೆಯಲಿದೆ.

ಮುಂಗಡ ಕಾಯ್ದಿರಿಸುವಿಕೆ: ಹೆಚ್ಚುವರಿ ಬಸ್​​ಗಳ ಸಾರಿಗೆಗಾಗಿ ಮುಂಗಡವಾಗಿ ಆಸನಗಳನ್ನು ಕಾಯ್ದಿರಿಸುವ ಸೌಲಭ್ಯವನ್ನು ಕಲ್ಪಿಸಲಾಗಿದೆ. ಪ್ರಯಾಣಿಕರು ಬಸ್ ನಿಲ್ದಾಣಗಳಿಗೆ ತೆರಳುವ ಮುನ್ನ ಮುಂಗಡ ಕಾಯ್ದಿರಿಸಲಾಗಿರುವ ಟಿಕೆಟ್​ಗಳ ಮೇಲೆ ನಮೂದಿಸಲಾಗಿರುವ

ಬಸ್ ನಿಲ್ದಾಣ/ಪಿಕ್‍ಅಪ್ ಪಾಯಿಂಟ್‍ನ ಹೆಸರನ್ನು ಗಮನಿಸಬಹುದಾಗಿದೆ. ಇ-ಟಿಕೆಟ್ ಬುಕಿಂಗ್‍ ಅನ್ನು www.ksrtc.karnataka.gov.in ವೆಬ್‌ಸೈಟ್ ಮುಖಾಂತರ ಮಾಡಬಹುದು. ಪ್ರಯಾಣಿಕರು ಕರ್ನಾಟಕ ಹಾಗೂ ಅಂತಾರಾಜ್ಯದಲ್ಲಿ ಇರುವ ಬುಕಿಂಗ್ ಕೌಂಟರ್​ಗಳ ಮೂಲಕವೂ ಮುಂಗಡವಾಗಿ ಆಸನಗಳನ್ನು ಕಾಯ್ದಿರಿಸಬಹುದು ಎಂದು ಕೆಎಸ್‌ಆರ್‌ಟಿಸಿ ಪ್ರಕಟಣೆ ತಿಳಿಸಿದೆ.

ರಿಯಾಯಿತಿ ಆಫರ್: ನಾಲ್ಕು ಅಥವಾ ಹೆಚ್ಚು ಪ್ರಯಾಣಿಕರು ಒಟ್ಟಾಗಿ ಮುಂಗಡ ಟಿಕೆಟು ಕಾಯ್ದಿರಿಸಿದಲ್ಲಿ ಶೇ.5ರಷ್ಟು ರಿಯಾಯಿತಿ ನೀಡಲಾಗುವುದು ಹಾಗೂ ಹೋಗುವ ಮತ್ತು ಬರುವ ಪ್ರಯಾಣದ ಟಿಕೆಟ್‍ ಅನ್ನು ಒಟ್ಟಿಗೆ ಕಾಯ್ದಿರಿಸಿದಾಗ ಬರುವ ಪ್ರಯಾಣ ದರದಲ್ಲಿ ಶೇ.10ರಷ್ಟು ರಿಯಾಯಿತಿ ನೀಡಲಾಗುವುದು. ನೆರೆ ರಾಜ್ಯಗಳಾದ ತಮಿಳುನಾಡು, ಆಂಧ್ರ ಪ್ರದೇಶ, ತೆಲಂಗಾಣ, ಕೇರಳ, ಗೋವಾ, ಮಹಾರಾಷ್ಟ್ರ ಹಾಗೂ ಪುದುಚೆರಿ ಸೇರಿದಂತೆ ಪ್ರಮುಖ ನಗರಗಳಲ್ಲಿ ನಿಗಮದ ಮುಂಗಡ ಆಸನಗಳನ್ನು ಕಾಯ್ದಿರಿಸುವ ಕೌಂಟರ್​​ಗಳಿದ್ದು, ಇವುಗಳ ಮೂಲಕವೂ ಮುಂಗಡವಾಗಿ ಆಸನಗಳನ್ನು ನಿಗಮದ ಸಾರಿಗೆಗಳಿಗೆ ಕಾಯ್ದಿರಿಸಬಹುದು.

ಹೆಚ್ಚುವರಿ ವಿಶೇಷ ಬಸ್ ಸಂಚಾರ ಬಗ್ಗೆ ಅವುಗಳು ಹೊರಡುವ ಸ್ಥಳ ಹಾಗೂ ವೇಳಾಪಟ್ಟಿ ವಿವರಗಳನ್ನು ಮುಂಗಡವಾಗಿ ಆಸನಗಳನ್ನು ಕಾಯ್ದಿರಿಸುವ ಅಂತರ್ಜಾಲ ವ್ಯವಸ್ಥೆಯಲ್ಲಿ ಹಾಗೂ ಕೆಎಸ್‍ಆರ್​ಟಿಸಿ ನಿಗಮದ ವೆಬ್‍ಸೈಟ್‍ನಲ್ಲಿ ಸಾರ್ವಜನಿಕರ ಮಾಹಿತಿಗಾಗಿ ಒದಗಿಸಲಾಗಿದೆ. ಹೆಚ್ಚುವರಿ ಸಾರಿಗೆಗಳಲ್ಲಿ ಸಂಚರಿಸುವ ಪ್ರಯಾಣಿಕರು ಕಾಯ್ದಿರಿಸುವ ಮುಂಗಡ ಟಿಕೆಟ್​ಗಳಲ್ಲೂ ಕೂಡ ವಾಹನ ಹೊರಡುವ ಸ್ಥಳದ ವಿವರ ನಮೂದಿಸಲಾಗಿದೆ. ನಿಗಮದ ಕಾರ್ಯಾಚರಣೆ ವ್ಯಾಪ್ತಿಯಲ್ಲಿನ ಎಲ್ಲಾ ತಾಲೂಕು/ಜಿಲ್ಲಾ ಬಸ್ ನಿಲ್ದಾಣಗಳಿಂದ ಸಂಚಾರ ಒತ್ತಡಕ್ಕನುಗುಣವಾಗಿ ವಿಶೇಷ ಸಾರಿಗೆಗಳ ಕಾರ್ಯಾಚರಣೆ ಮಾಡಲಾಗುವುದು ಎಂದು ಕೆಎಸ್​ಆರ್​ಟಿಸಿ ಮುಖ್ಯ ಸಂಚಾರ ವಿಭಾಗದ ವ್ಯವಸ್ಥಾಪಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Leave a Comment