ಬೆಂಗಳೂರು: ಹಾಸನ ಲೋಕಸಭಾ ಕ್ಷೇತ್ರದ ಅಭ್ಯರ್ಥಿ ಪ್ರಜ್ವಲ್ ರೇವಣ್ಣ ಮತದಾನ ಮುಗಿದ ಬಳಿಕ ಜರ್ಮನಿಗೆ ತೆರಳಿದ್ದಾರೆ.
ತನಗೆ ಜೀವ ಬೆದರಿಕೆ ಹಾಕಿ ಲೈಂಗಿಕವಾಗಿ ಶೋಷಿಸಿದ್ದಾರೆ ಎಂದು ಆರೋಪಿಸಿ ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ಸಂತ್ರಸ್ತೆಯೊಬ್ಬರು ರಾಜ್ಯ ಮಹಿಳಾ ಆಯೋಗಕ್ಕೆ ದೂರು ನೀಡಿದ್ದಾರೆ.
ಈ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧಿಕೃತ ಟ್ವಿಟರ್ ಖಾತೆಯಲ್ಲಿ ಪೋಸ್ಟ್ ಮಾಡಲಾಗಿದೆ. ಹಲವು ಮಹಿಳೆಯರ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿರುವ ಆರೋಪ ಕೇಳಿ ಬಂದ ಹಿನ್ನೆಲೆ ಪ್ರಜ್ವಲ್ ರೇವಣ್ಣ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಶೇಷ ತನಿಖಾ ತಂಡ ರಚಿಸಲು ಸರ್ಕಾರ ತೀರ್ಮಾನಿಸಿದೆ. ಕೆಲವು ದಿನಗಳಿಂದ ಹಾಸನ ಜಿಲ್ಲೆಯಲ್ಲಿ ಪೆನ್ಡ್ರೈವ್ ಮೂಲಕ ಅಶ್ಲೀಲ ವಿಡಿಯೋ ತುಣುಕುಗಳು ಹರಿದಾಡುತ್ತಿದ್ದು, ಮಹಿಳೆಯರ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿರುವುದು ಮೇಲ್ನೋಟಕ್ಕೆ ಕಂಡುಬಂದಿದೆ. ಈ ಹಿನ್ನೆಲೆ ಎಸ್ಐಟಿ ತಂಡ ತನಿಖೆ ನಡೆಸುವಂತೆ ರಾಜ್ಯ
ಮಹಿಳಾ ಆಯೋಗದ ಅಧ್ಯಕ್ಷರು ಸರ್ಕಾರಕ್ಕೆ ಪತ್ರ ಬರೆದಿದ್ದಾರೆ. ಈ ಹಿನ್ನೆಲೆ ಸರ್ಕಾರ ವಿಶೇಷ ತಂಡ ರಚನೆ ಮಾಡುವ ಕುರಿತು ತೀರ್ಮಾನ ಕೈಗೊಂಡಿದೆ ಎಂದು ತಿಳಿಸಿದಿದ್ದಾರೆ. ಈ ನಡುವೆ ಸಂಸದ ಪ್ರಜ್ವಲ್ ರೇವಣ್ಣ ವಿದೇಶಕ್ಕೆ ತೆರಳಿರುವುದಾಗಿ ಪೊಲೀಸರು ಮಾಹಿತಿ ನೀಡಿದ್ದಾರೆ.
ಪ್ರಜ್ವಲ್ ರೇವಣ್ಣ ದೇಶ ಬಿಟ್ಟು ಹೋಗಿರುವ ಬಗ್ಗೆ ಮಾಹಿತಿ ಇದೆ. ಸಂತ್ರಸ್ತ ಮಹಿಳೆಯರನ್ನು ಮಹಿಳಾ ಆಯೋಗ ಸಂಪರ್ಕಿಸುತ್ತಿದೆ. ಎಸ್ಐಟಿ ರಚನೆಯಾದ ಮೇಲೆ ಅಧಿಕಾರಿಗಳಿಗೆ ಸಂಪೂರ್ಣ ಅಧಿಕಾರ ಕೊಟ್ಟು ತನಿಖೆ ಮಾಡುತ್ತೇವೆ ಎಂದು ಪರಮೇಶ್ವರ್ ಮಾಹಿತಿ ನೀಡಿದರು. ಯಾವುದೇ ಸರ್ಕಾರದ ಹಸ್ತಾಕ್ಷೇಪ ಇಲ್ಲದೆ ಈ ಪ್ರಕರಣ ತನಿಖೆಯಾಗಲಿದೆ. ಪ್ರಜ್ವಲ್ ರೇವಣ್ಣಗೆ ನೋಟಿಸ್ ಕೊಡುವ ವಿಚಾರ ಎಸ್ಐಟಿ ಅಧಿಕಾರಿಗಳಿಗೆ ಬಿಟ್ಟದ್ದು ಎಂದು ಗೃಹ ಸಚಿವ ಪರಮೇಶ್ವರ್ ಹೇಳಿದರು.









