ಬೆಂಗಳೂರು : ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಠ ಪಂಗಡದವರಿಗೆ ಮೀಸಲಿಟ್ಟ ಹುದ್ದೆಗಳನ್ನು ಭರ್ತಿ ಮಾಡದಿರುವುದು ಸರ್ಕಾರಿ ಸೇವೆಯಲ್ಲಿ ಆ ಸಮುದಾಯಗಳಿಗೆ ಕಲ್ಪಿಸಿದ ಪ್ರಾತಿನಿಧ್ಯ ಕಸಿದುಕೊಂಡಂತೆ ಎಂದು ಅಭಿಪ್ರಾಯಪಟ್ಟಿರುವ ಹೈಕೋರ್ಟ್, ಮುಂದಿನ ಆರು ತಿಂಗಳ ಅವಧಿಯಲ್ಲಿ ರಾಜ್ಯ ಸರ್ಕಾರದ ಎಲ್ಲಾ ಇಲಾಖೆಗಳು ಮತ್ತು ಸಂಸ್ಥೆಗಳಲ್ಲಿ ಖಾಲಿಯಿರುವ ಬ್ಯಾಕ್‌ಲಾಗ್ ಹುದ್ದೆಗಳನ್ನು ಸಮರೋಪಾದಿಯಾಗಿ ಭರ್ತಿ ಮಾಡಬೇಕು ಎಂದು ಮಹತ್ವದ ತೀರ್ಪು ನೀಡಿದೆ. ಬೆಂಗಳೂರಿನ ಪಟ್ಟಂದೂರು ಅಗ್ರಹಾರದ ನಿವಾಸಿ ಎಂ. ಮಂಜುನಾಥ್ ಪ್ರಸಾದ್ ಸಲ್ಲಿಸಿದ್ದ ಮೇಲ್ಮನವಿಯನ್ನು ಪುರಸ್ಕರಿಸಿದ ಮುಖ್ಯ ನ್ಯಾಯಮೂರ್ತಿ ಪಿ.ಬಿ.ವರಾಳೆ ಮತ್ತು ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರಿದ್ದ ವಿಭಾಗೀಯ ನ್ಯಾಯಪೀಠ ಈ ತೀರ್ಪು ಮಾಡಿದೆ.
ಬೆಂಗಳೂರಿನ ವೈದ್ಯಕೀಯ ಮಹಾ ವಿದ್ಯಾಲಯದಲ್ಲಿರುವ ಬ್ಯಾಕ್ ಲಾಗ್ ಹುದ್ದೆಗಳನ್ನು ಭರ್ತಿ ಮಾಡುವಂತೆ ಕೋರಿ ಮಂಜುನಾಥ್ ಪ್ರಸಾದ್ ಹೈಕೋರ್ಟ್‌ಗೆ ತರಕಾರು ಅರ್ಜಿ ಸಲ್ಲಿಸಿದ್ದರು. ಅರ್ಜಿ ವಿಚಾರಣೆ ನಡೆಸಿದ ಏಕ ಸದಸ್ಯ ಪೀಠ, ಈ ಸಂಬಂಧ ಸಂಬಂಧಪಟ್ಟ ಪ್ರಾಧಿಕಾರಗಳಿಗೆ ಮನವಿ ಸಲ್ಲಿಸುವಂತೆ ಸೂಚನೆ ನೀಡಿ ಅರ್ಜಿ ಇತ್ಯರ್ಥ ಪಡಿಸಿತ್ತು. ಆದರೆ, ಅರ್ಜಿದಾರರ ಮನವಿಗೆ ಸಂಬಂಧಿಸಿದಂತೆ ಯಾವುದೇ
ರೀತಿಯ ಪರಿಹಾರ ಕಲ್ಪಿಸಿರಲಿಲ್ಲ. ಇದರಿಂದ ವಿಭಾಗೀಯ ಪೀಠಕ್ಕೆ ಮೇಲ್ಮನವಿ ಸಲ್ಲಿಸಿದ್ದರು.
ವಿಚಾರಣೆ ವೇಳೆ ಅರ್ಜಿದಾರರ ಪರ ವಕೀಲರು, ಬ್ಯಾಕ್ ಲಾಗ್ ಹುದ್ದೆಗಳ ಮೀಸಲು ನೇಮಕಾತಿಗಳಾಗಿವೆ. ಈ ಹುದ್ದೆಗಳನ್ನ ಭರ್ತಿ ಮಾಡದೆ ಖಾಲಿ ಉಳಿಸುವುದು ಸಂವಿಧಾನದ ಪರಿಚ್ಛೇದ 14 (ಸಮಾನತೆ) ಮತ್ತು 16 (ರಾಜ್ಯಗಳ ಉದ್ಯೋಗವಕಾಶದಲ್ಲಿ ಸಮಾನ ಅವಕಾಶ ಕಲ್ಪಿಸುವ) ಉಲ್ಲಂಘನೆಯಾಗಲಿದೆ ಎಂದು ವಾದ ಮಂಡಿಸಿದ್ದರು
















