ಮೈಸೂರು: ದೇಶದ ಇತಿಹಾಸದಲ್ಲೇ ಅತಿ ದೊಡ್ಡ ಕಲ್ಯಾಣ ಕಾರ್ಯಕ್ರಮ ಎನ್ನಲಾಗುತ್ತಿರುವ ಮನೆಯ ಯಜಮಾನಿಗೆ ಪ್ರತಿ ತಿಂಗಳು 2 ಸಾವಿರ ರುಪಾಯಿ ನೀಡುವ ರಾಜ್ಯ ಕಾಂಗ್ರೆಸ್ ಸರ್ಕಾರದ ಮಹತ್ವಾಕಾಂಕ್ಷೆಯ ನಾಲ್ಕನೇ ಗ್ಯಾರಂಟಿಯಾದ ಗೃಹಲಕ್ಷ್ಮಿ ಯೋಜನೆಗೆ ಬುಧವಾರ ಅದ್ಧೂರಿ ಚಾಲನೆ ಸಿಕ್ಕಿದೆ. ಮೈಸೂರಿನ ಮಹಾರಾಜ ಕಾಲೇಜು ಮೈದಾನದಲ್ಲಿ ಮದ್ಯಾಹ್ನ ಕಾಂಗ್ರೆಸ್ ವರಿಷ್ಠ ರಾಹುಲ್ ಗಾಂಧಿ ಉಪಸ್ಥಿತಿಯಲ್ಲಿ ರಾಜ್ಯಸಭಾ ಪ್ರತಿಪಕ್ಷದ ನಾಯಕ ಹಾಗೂ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಬಟನ್ ಒತ್ತುವ ಮೂಲಕ ಯೋಜನೆಗೆ ಚಾಲನೆ ನೀಡಿದ್ದಾರೆ. ಕಾರ್ಯಕ್ರಮದ ಚಾಲನೆ ವೇಳೆ ವೇದಿಕೆಯಲ್ಲಿ ಅಷ್ಟ ಲಕ್ಷ್ಮಿಯರು ಗಮನ ಸೆಳೆದರು. ಇದೇ ವೇಳೆ ಸರಕಾರಕ್ಕೆ 100 ದಿನ ಪುರೈಕೆ ಹಿನ್ನೆಲೆಯಲ್ಲಿ ಸರ್ಕಾರದ ಸಾಧನೆ ಕುರಿತ ಕಿರುಹೊತ್ತಿಗೆ ಬಿಡುಗಡೆ ಮಾಡಲಾಯ್ತು. DBT ಮೂಲಕ ಗೃಹ ಲಕ್ಷ್ಮಿ ಯೋಜನೆ ಫಲಾನುಭವಿಗಳ ಅಕೌಂಟ್ ಗೆ 2 ಸಾವಿರ ವರ್ಗಾವಣೆ ಗೆ ರಾಹುಲ್ ಗಾಂಧಿ ಚಾಲನೆ ನೀಡಿದರು.
ಮುಖ್ಯಮಂತ್ರಿ ಸಿದ್ದರಾಮಯ್ಯ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದು, ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಸಚಿವರಾದ ಡಾ.ಎಚ್.ಸಿ.ಮಹದೇವಪ್ಪ, ಲಕ್ಷ್ಮಿ ಹೆಬ್ಬಾಳ್ಕರ್, ಕೆ.ಎಚ್.ಮುನಿಯಪ್ಪ, ಕೆ.ವೆಂಕಟೇಶ್, ಎನ್. ಚಲುವರಾಯಸ್ವಾಮಿ, ಕೆ.ಎನ್.ರಾಜಣ್ಣ, ಎಸ್.ಎಸ್.
ಬೋಸರಾಜು, ಮೇಯರ್ ಶಿವಕುಮಾರ್ ಮತ್ತಿತರರು ವೇದಿಕೆಯಲ್ಲಿದ್ದರು. ಮೈಸೂರು, ಚಾಮರಾಜನಗರ, ಮಂಡ್ಯ ಹಾಗೂ ಹಾಸನ ಜಿಲ್ಲೆಗಳಿಂದ ಸುಮಾರು 1.30 ಲಕ್ಷಕ್ಕೂ ಹೆಚ್ಚು ಫಲಾನುಭವಿಗಳು, ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದಾರೆ.















