Coastal Bulletin

ಬೆಂಗಳೂರು: ಕರ್ನಾಟಕದ ನೂತನ ಮುಖ್ಯಮಂತ್ರಿಯಾಗಿ ಆಯ್ಕೆಯಾದ ಬಸವರಾಜ ಬೊಮ್ಮಾಯಿ ಮೂಲತಃ ಹುಬ್ಬಳ್ಳಿಯವರು.28-01-1960 ರಂದು ಹುಬ್ಬಳ್ಳಿಯಲ್ಲಿ ಜನಿಸಿದ ಬಸವರಾಜ ಬೊಮ್ಮಾಯಿ ಅವರ ಪ್ರಾಥಮಿಕ ಮತ್ತು ಹೈಸ್ಕೂಲ್ ವಿದ್ಯಾಭ್ಯಾಸ ಹುಬ್ಬಳ್ಳಿ ದೇಶಪಾಂಡೆ ನಗರದ ರೋಟರಿ ಇಂಗ್ಲೀಷ್​ ಮಾಧ್ಯಮ ಶಾಲೆಯಲ್ಲಿ ಆಯಿತು. ನಂತರ ಪಿ.ಸಿ. ಜಾಬಿನ ವಿಜ್ಞಾನ ಮಹಾವಿದ್ಯಾಲಯದಲ್ಲಿ ಕಾಲೇಜು ವ್ಯಾಸಂಗ, ಬಳಿಕ ಬಿ.ವ್ಹಿ. ಭೂಮರಡ್ಡಿ ತಾಂತ್ರಿಕ ಮಹಾವಿದ್ಯಾಲಯದಲ್ಲಿ ಇಂಜಿನಿಯರಿಂಗ್ ಮಾಡಿದರು.ಪುಣೆಯ ಟೆಲ್ಕೋ ಕಂಪನಿಯಲ್ಲಿ ಎರಡು ವರ್ಷ ಟೆಕ್ನಿಕಲ್ ಟ್ರೈನಿಂಗ್ ಪಡೆದ ಬೊಮ್ಮಾಯಿಯವರು ನಂತರ ತಮ್ಮದೇ ಆದ ಕೈಗಾರಿಕೆ ಸ್ಥಾಪಿಸಿದರು.

ಕಾಲೇಜ್ ದಿನದಿಂದಲೇ ಸಾಮಾಜಿಕ ಹಾಗೂ ರಾಜಕೀಯ ಚಟುವಟಿಕೆಗಳಲ್ಲಿ ಹೆಚ್ಚು ಆಸಕ್ತಿ ಇದ್ದುದರಿಂದ ವಿವಿಧ ಸಂಘಟನೆಗಳಲ್ಲಿ ಸಕ್ರಿಯರಾಗಿದ್ದರು.1995ರಲ್ಲಿ ಹುಬ್ಬಳ್ಳಿ ನಗರದ ಈದ್ಗಾ ಮೈದಾನದ ಹೋರಾಟದಲ್ಲಿ ನೇತೃತ್ವ ವಹಿಸಿದ್ದರು.ನಂತರ ರಾಜ್ಯ ಜನತಾದಳ ಪ್ರಧಾನ ಕಾರ್ಯದರ್ಶಿಯಾಗಿ ಆಯ್ಕೆಯಾದರು.ಆ‌ ಸಮಯದಲ್ಲಿ ಮುಖ್ಯಮಂತ್ರಿಯಾಗಿದ್ದ ಜೆ.ಎಚ್. ಪಟೇಲ್ ಅವರಿಗೆ ರಾಜಕೀಯ ಕಾರ್ಯದರ್ಶಿಯಾಗಿ ಕಾರ್ಯ ನಿರ್ವಹಿಸಿದರು.


2007ರ ಜುಲೈನಲ್ಲಿ ಧಾರವಾಡದಿಂದ ನರಗುಂದವರೆಗೆ 21 ದಿನಗಳ

ಕಾಲ 232 ಕಿ.ಮೀ ದೂರ ರೈತರೊಂದಿಗೆ ಬೃಹತ್ ಪಾದಯಾತ್ರೆ ಕೈಗೊಂಡಿದ್ದರು. 1993ರಲ್ಲಿ ಹುಬ್ಬಳ್ಳಿ ನಗರದಲ್ಲಿ ನಡೆದ ರಾಜ್ಯ ಯುವಜನತಾ ದಳದ ಐತಿಹಾಸಿಕ ಬೃಹತ್ ರ್ಯಾಲಿಯ ಸಂಘಟನೆಯ ನೇತೃತ್ವ ವಹಿಸಿದ್ದರು. 1997 ಹಾಗೂ 2003ರಲ್ಲಿ ರಾಜ್ಯ ವಿಧಾನ ಪರಿಷತ್ತಿಗೆ ಸ್ಥಳೀಯ ಸಂಸ್ಥೆಗಳಿಂದ (ಧಾರವಾಡ- ಹಾವೇರಿ- ಗದಗ) ನಡೆದ ಚುನಾವಣೆಯಲ್ಲಿ ಸತತ ಎರಡು ಬಾರಿ ವಿಧಾನ ಪರಿಷತ್ತಿನ ಸದಸ್ಯರಾಗಿ ಆಯ್ಕೆಯಾದರು.

Leave a Comment